ಅಧಿವೇಶನ ಬೆಳಗಾವಿಯಲ್ಲಿ ಇಲ್ಲ…

0

ಬೆಳಗಾವಿ. ನ. 18- ಈ ಬಾರಿಯ ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಹೋದ ವರ್ಷ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ನೆರೆ ಹಾಗೂ ಅತಿವೃಷ್ಟಿ ಉಂಟಾಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟ ಸಂಭವಿಸಿತ್ತು. ಸಾವಿರಾರು ಮಂದಿ ಸಂತ್ರಸ್ತರಾಗಿದ್ದರು. ಹೀಗಾಗಿ, ನೆರೆ ಪರಿಹಾರ ಕಾರ್ಯಗಳಲ್ಲಿ ಅಧಿಕಾರಿಗಳು ತೊಡಗಬೇಕು, ಅವರಿಗೆ ಸಮಯ ಬೇಕು. ಆದ್ದರಿಂದ ಅಧಿವೇಶನವನ್ನು ಬೆಳಗಾವಿ ಬದಲಿಗೆ ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.
ಈ ಬಾರಿ ಕೋವಿಡ್-19 ನೆಪವೊಡ್ಡಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ನಿರ್ಧರಿಸಲಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೂರಾರು ಕೋಟಿ ವೆಚ್ಚದಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಿರುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸುತ್ತಿದ್ದಾರೆ. ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸದಿರುವುದು ಹಾಗೂ ಈಗ ಅಧಿವೇಶನ ನಡೆಸದಿರುವುದು ಇಲ್ಲಿನ ಜನರಲ್ಲಿ ಆಕ್ರೋಶ ತರಿಸಿದೆ.
ಸುವರ್ಣ ವಿಧಾನಸೌಧ ನಿರ್ಮಾಣವಾದ ನಂತರ ವರ್ಷದಲ್ಲಿ ಹತ್ತು ದಿನಗಳು ವಿಧಾನಮಂಡಲ ಅಧಿವೇಶನ ನಡೆಸಲಾಗುತ್ತಿತ್ತು. 2018ರಲ್ಲಿ ಅಧಿವೇಶನ ನಡೆದಿತ್ತು. ಅದಾದ ನಂತರ ನಡೆಸಿಲ್ಲ. ಇದರ ಕುರಿತು ಸಾಮಾಜಿಕ ಮಾಧ್ಯಮದಲ್ಲೂ ಚರ್ಚೆಯಾಗುತ್ತಿದೆ. ಸರ್ಕಾರವು ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತಾಳುತ್ತಿರುವುದನ್ನು ಕಟುವಾದ ಮಾತುಗಳಲ್ಲಿ ಟೀಕಿಸುತ್ತಿದ್ದಾರೆ. ಸುವರ್ಣ ವಿಧಾನಸೌಧಕ್ಕೆ ಪ್ರಸ್ತುತ ಕೆಲವು ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗಿದೆ.
ಡಿಸೆಂಬರ್‌ 7ರಿಂದ 15 ರವರೆಗೆ ಅಧಿವೇಶನ

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಜಯನಗರ ಹೊಸ ಜಿಲ್ಲೆಗೆ ಸಂಪುಟ ತಾತ್ವಿಕ‌ ಒಪ್ಪಿಗೆ ನೀಡಿದೆ.
ಸಚಿವ ಶ್ರೀರಾಮುಲು ಮಾತನಾಡಿ, ಪರಿಶಿಷ್ಟರ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಾಯ ಇತ್ತು. ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿಯ ಸಾಧಕ ಬಾಧಕ ಚರ್ಚೆ ಮಾಡಲಾಗಿದೆ. ಮುಂದಿನ ತೀರ್ಮಾನಕ್ಕಾಗಿ ಸಂಪುಟ ಉಪ ಸಮಿತಿ ರಚಿಸಲಾಗಿದೆ’ ಎಂದರು.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ ಮಾಡಲಾಗಿದೆ. ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ರೂ 500 ಕೋಟಿ ಕೆಂದ್ರದಿಂದ ಬಿಡುಗಡೆ ಆಗಿದೆ. ಇನ್ನೂ ಸರ್ಕಾರದಿಂದ ರೂ 1000 ಕೋಟಿ ಖರ್ಚಿನ ಮೂಲಕ ಪರಿಹಾರ ಕ್ರಮಗಳನ್ನು ಮಾಡಲು ತೀರ್ಮಾನಿಸಲಾಗಿದೆ’ ಎಂದರು.
‘ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ಅಭಿವೃದ್ದಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ದಿ ನಿಗಮಕ್ಕೆ ಸಾಲ ಪಡೆಯಲು ಅನುಮತಿ ನೀಡಲಾಗಿದೆ. ಹೊಸಪೇಟೆಯಲ್ಲಿ ₹13 ಕೋಟಿ ಅಂದಾಜು ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ. ಎಸ್‌ಸಿಎಸ್‌ಟಿಗೆ ಮೀಸಲು ಪ್ರಮಾಣ ಹೆಚ್ಚಳ ನಿಗದಿಗೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ಸಿಎಂಗೆ ಅಧಿಕಾರವಿದೆ’ ಎಂದರು.
2021ನೇ ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ. ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗಿದೆ.
ಮರಾಠಾ ಸಮುದಾಯ ಅಭಿವೃದ್ದಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು‌‌‌. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ‌. ಒಂದು ಸಮುದಾಯದ ಅಭಿವೃದ್ದಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ‌. ಆದರೂ ಅಭಿವೃದ್ದಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ 1000 ಕೋಟಿ ಬಿಡುಗಡೆ ಮಾಡಿ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧರಿಸ ಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಾಡಲು ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ. ಮುಂದೆ ಅದಕ್ಕೆ ಹಣ ಮೀಸಲಿಡುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಸದ್ಯಕ್ಕಂತೂ ಅದಕ್ಕೆ ಹಣ ಮೀಸಲಿಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಬರೀ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.