ಜಿಪಂ ಸದಸ್ಯ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಬೆಂಬಲಿಗ ರಾಜೀನಾಮೆ

0

ಬೆಳಗಾವಿ, ನ. 29 – ಸಾಂಬ್ರಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಬೆಂಬಲಿಗ ಕೃಷ್ಣ ಅನಿಗೋಳಕರ ಅವರು ಜಿಲ್ಲಾ ಪಂಚಾಯಿತಿ ಸದಸ್ಯ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಸಿ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಆಗುತ್ತೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

ಗ್ರಾಮೀಣ ಕ್ಷೇತ್ರದ ಹಲವರು ನಾಯಕರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು, ಬಿಜೆಪಿ ಪಕ್ಷ ಸೇರ್ಪಡೆಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದವೂ ನಮ್ಮ ಮೇಲಿದೆ. ಆದಷ್ಟು ಬೇಗನೆ ಬಿಜೆಪಿ ಸೇರುತ್ತೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವು ಕಾಂಗ್ರೆಸ್ ಕಾರ್ಯಕರ್ತರು ನನ್ನ ಜೊತೆ ಬಿಜೆಪಿ ಸೇರಲಿದ್ದಾರೆ. ರಾಜೀನಾಮೆ ಪತ್ರವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದು, ತಕ್ಷಣ ಅಂಗೀಕರಿಸುವಂತೆ ಕೋರಿದ್ದೇನೆ ಎಂದರು.

ಈಚೆಗೆ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನೇಕಾರರ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಕೃಷ್ಗ್ನ ಚುನಾಯಿತರಾಗಿದ್ದರು. ಅವರು ಈಗ ಬಿಜೆಪಿಯತ್ತ ಮುಖ ಮಾಡಿದ್ದು, ಬೆಳಗಾವಿ ಲೋಕಸಭಾ ಚುನಾವಣೆ ಸಮೀಪಿಸು ತ್ತಿರುವಂತೆಯೇ ಆಪರೇಷನ್ ಕಮಲಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ.