ಜಿಲ್ಲೆಯಲ್ಲಿ ಕೋವಿಡ್-19 ನಿರ್ಲಕ್ಷ್ಯ ಬೇಡ: ಸಚಿವ ರಮೇಶ್ ಜಾರಕಿಹೊಳಿ

0

ಬೆಳಗಾವಿ ನ.30. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖಗೊಂಡಿವೆ. ಆದಾಗ್ಯೂ ಇದರ ಬಗ್ಗೆ ನಿರ್ಲಕ್ಷ್ಯ ಬೇಡ, ಆರೋಗ್ಯ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಮುಂದುವರಿಸುವುದರ ಜತೆಗೆ ಯಾವುದೇ ಸಂದರ್ಭದಲ್ಲಿ ಜನರಿಗೆ ಸೇವೆ ಒದಗಿಸಲು ಸಿದ್ದರಿರಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ಸೂಚನೆ ನೀಡಿದರು.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ನ.30) ರಂದು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಗೋಕಾಕ, ಚಿಕ್ಕೋಡಿ, ಹಾಗೂ ಅಥಣಿ ತಾಲೂಕಿನ ಕೋವಿಡ್-19 ಸಕ್ರಿಯ ಪ್ರಕರಣಗಳ ಹಾಗೂ ಮರಣ ಸಂಖ್ಯೆ ಪ್ರಮಾಣದ ಮಾಹಿತಿಯನ್ನು ಅವರು ಪಡೆದುಕೊಂಡರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 274 ಪ್ರಕರಣಗಳು ಸಕ್ರಿಯವಾಗಿದ್ದು ಒಟ್ಟು ಇಲ್ಲಿಯವರೆಗೆ 341 ಜನರು ಕೋವಿಡ್ ಸೋಂಕಿನಿಂದ ಮರಣ ಹೊಂದಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಆಕ್ಸಿಜನ್ ಅಭಾವ ಇಲ್ಲ ಅದೇ ರೀತಿ ಮರಣ ಪ್ರಮಾಣ ಕೂಡ ಶೇ.97 ರಷ್ಟು ತಗ್ಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಧಿಕಾರಿ ಡಾ.ಎಸ್.ವಿ.ಮುನ್ಯಾಳ,ಹಾಗೂ ತಾಲೂಕು ವೈದ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.