ಬೆಳಗಾವಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ: ಡಿಸಿಎಂ ಗೋವಿಂದ ಕಾರಜೋಳ

0

ಬೆಳಗಾವಿ: ಬಿಮ್ಸ್ ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು.
ಇಂತಹ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ ನಡೆದ ಆನ್ ಲೈನ್ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಆಕ್ಸಿಜನ್, ಔಷಧಿ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಯನ್ನು ಸರಕಾರದಿಂದ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಸೋಂಕಿತರ ಚಿಕಿತ್ಸೆ ಹಾಗೂ ಆರೈಕೆಯಲ್ಲಿ ಸಮಸ್ಯೆಯಾಗಬಾರದು ಎಂದು ಕಾರಜೋಳ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ತವ್ಯ ನಿರ್ಲಕ್ಷ್ಯ ತೋರಿದರೆ ನಿರ್ಧಾಕ್ಷಿಣ್ಯ ಕ್ರಮ:

ಬಿಮ್ಸ್ ಬಗ್ಗೆ ಅನೇಕ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಕರ್ತವ್ಯ ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಿಬ್ಬಂದಿಯನ್ನು ಮುಲಾಜಿಲ್ಲದೇ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಬಿಮ್ಸ್ ನಿರ್ದೇಶಕರಿಗೆ ಹೇಳಿದರು.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರವಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕರ್ತವ್ಯಲೋಪ ಎಸಗುವ ವೈದ್ಯರು ಮತ್ತು ಇತರೆ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸಬೇಕು. ಬಿಮ್ಸ್ ನಿರ್ದೇಶಕರಿಗೆ ಇದು ಸಾಧ್ಯವಾಗದಿದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅಂತಹವರ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಗೂ ಚಿಕಿತ್ಸೆ:

ಬ್ಲ್ಯಾಕ್ ಫಂಗಸ್ ಸೇರಿದಂತೆ ಸೋಂಕಿತರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗಳಲ್ಲಿ ರೋಗಿಗಳು ಮೃತಪಟ್ಟರೆ ಒಂದು ತಾಸಿನೊಳಗೆ ಅವರ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಬೇಕು. ಬಿಮ್ಸ್ ನಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ. ಈ ಪಕರಣಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಬಿಮ್ಸ್ ವೈದ್ಯರ ಮೇಲಿನ ಹೊರೆ ಕಡಿಮೆಗೊಳಿಸಲು ಕೇಸ್ ಗಳ ಆಧಾರದ ಮೇಲೆ ಖಾಸಗಿ ವೈದ್ಯರ ಸೇವೆಯನ್ನು ಪಡೆದುಕೊಳ್ಳಬೇಕು.

ಲಸಿಕಾಕರಣ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಈಗಾಗಲೇ ಮೊದಲ‌ ಡೋಸ್ ಪಡೆದುಕೊಂಡಿರುವವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ಪ್ರವಾಹ-ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ:

ಮಳೆಗಾಲ ಆರಂಭಗೊಳ್ಳಲಿದ್ದು, ನದಿತೀರದ 377 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಈ ಗ್ರಾಮದ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಮುನ್ನಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿ ಕೋವಿಡ್ ಕೂಡ ಇರುವುದರಿಂದ ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯ ಕಾಳಜಿ(ಪರಿಹಾರ) ಕೇಂದ್ರಗಳನ್ನು ಆರಂಭಿಸಬೇಕು.
ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ಜನರಿಗೆ ಊಟೋಪಹಾರ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಅದೇ ರೀತಿ ಜಾನುಗಳಿಗೂ ಕೂಡ ರಕ್ಷಣೆ ನೀಡಬೇಕು. ಮೇವು ಮತ್ತು ಲಸಿಕೆ ದಾಸ್ತಾನು ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಜಲಾಶಯ ಮಟ್ಟದ ಬಗ್ಗೆ ಮಾಹಿತಿ ವಿನಿಮಯ:
ನೆರೆಯ ಮಹಾರಾಷ್ಟ್ರದ ಜಲಾಶಯಗಳ ಮಟ್ಟದ ಮೇಲೆ ನಿರಂತರ ನಿಗಾ ವಹಿಸಬೇಕು. ಉಭಯ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಲಾಶಯಗಳ ಮಟ್ಟ ಹಾಗೂ ನೀರು ಬಿಡುಗಡೆ ಕುರಿತು ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ:

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ಲಾಕ್ ಡೌನ್ ಸಂದರ್ಭವನ್ನು ಬಳಸಿಕೊಂಡು ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಮಂಗಲಾ ಅಂಗಡಿ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಪ್ರಮುಖ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ನಗರದ ಕೋಟೆ ಕೆರೆಗೆ ಸುತ್ತಮುತ್ತಲ‌ ಬಡಾವಣೆಗಳ ಚರಂಡಿ ನೀರು ಸೇರದಂತೆ ಸೂಕ್ತ ಕ್ರಮಕೈಗೊಳ್ಳಬೇಕು. ಕೆರೆ ಆವರಣದಲ್ಲಿ ಮಕ್ಕಳ ಪಾರ್ಕ್ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಸುವರ್ಣಸೌಧಕ್ಕೆ ಸೋಲಾರ್ ಪ್ಯಾನಲ್ ಅಳವಡಿಸಲು ಕ್ರಮ:
ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಡಿ ಬಿಡಿಯಾಗಿ ಸರಕಾರಿ ಕಚೇರಿಗಳ ಮೇಲೆ ಸೋಲಾರ್ ಫಲಕಗಳನ್ನು ಅಳವಡಿಸುವ ಬದಲು ಸುವರ್ಣ ವಿಧಾನಸೌಧದ ಮೇಲೆ ಸೋಲಾರ್ ವಿದ್ಯುತ್ ಫಲಕಗಳನ್ನು ಅಳವಡಿಸುವುದು ಸೂಕ್ತ. ಈ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಅವರಿಗೆ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ, ಸಣ್ಣ ನೀರಾವರಿ, ಆರೋಗ್ಯ ಇಲಾಖೆಗಳ ಮಾಹಿತಿಯನ್ನು ಪಡೆದುಕೊಂಡರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಪಾಲಿಕೆಯ ಆಯುಕ್ತರಾದ ಜಗದೀಶ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್. ವಿ.ಮುನ್ಯಾಳ ಸೇರಿ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಆನ್ ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');