ಕೋವಿಡ್ ಆರೈಕೆ ಕೇಂದ್ರಕ್ಕೆ ತೆರಳಲು ಸೋಂಕಿತೆಯ ಮನವೊಲಿಸಿದ ಜಿಲ್ಲಾಧಿಕಾರಿ ಹಿರೇಮಠ

0

ಬೆಳಗಾವಿ:  ಕೋವಿಡ್ ಸೋಂಕು ಪತ್ತೆ ಮಾಡುವುದರ ಜತೆಗೆ ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ‌.ಜಿ.ಹಿರೇಮಠ ಸೂಚನೆ ನೀಡಿದರು.

ಭೂತರಾಮನಹಟ್ಟಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಗ್ರಾಮದಲ್ಲಿ ನಡೆದಿರುವ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ್ಯಾಟ್) ಪ್ರಕ್ರಿಯೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.

ಸೋಂಕಿತರನ್ನು ಗುರುತಿಸಿ ಅವರನ್ನು ಕೂಡಲೇ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಿದರೆ ಮಾತ್ರ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ.

ಆದ್ದರಿಂದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುತ್ತಿದೆ. ಸೋಂಕು ಪತ್ತೆ ಮಾಡುವುದರ ಜತೆಗೆ ಸೋಂಕಿತರ ಸಂಪರ್ಕಿತರನ್ನು ಕೂಡ ಸ್ಥಳಲ್ಲಿಯೇ ಪರೀಕ್ಷೆ ಮಾಡಲು ಅನುಕೂಲವಾಗಲಿದೆ.

ಶೀತ, ಜ್ವರ ಹಾಗೂ ಕೋವಿಡ್ ಲಕ್ಷಣಗಳನ್ನು ಹೊಂದಿದವರು ಸ್ವಯಂಪ್ರೇರಣೆಯಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕು ದೃಢಪಟ್ಟರೆ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡರು.

ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಗುಣಮಟ್ಟದ ಊಟೋಪಹಾರ ಹಾಗೂ ಔಷಧೋಪಚಾರ ನೀಡಲಾಗುತ್ತಿದೆ. ಇದರಿಂದ ಸೋಂಕಿತರು ಶೀಘ್ರ ಗುಣಮುಖರಾಗಬಹುದು. ಚಿಕಿತ್ಸೆ ಅವಶ್ಯಕತೆ ಇದ್ದವರಿಗೆ ಮಾತ್ರ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದು ವಿವರಿಸಿದರು.

ಇದೇ ವೇಳೆ ಮನೆ‌ಮನೆಗೆ ಭೇಟಿ ನೀಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ.‌ ಗ್ರಾಮಸ್ಥರು ಕೂಡ ಸರಕಾರದ ಮಾರ್ಗಸೂಚಿ ಪಾಲಿಸುವ ಮೂಲಕ ಸೋಂಕು ತಡೆಗಟ್ಟಲು ಕೈಜೋಡಿಸಬೇಕು ಎಂದು ಹೇಳಿದರು.

ಸೋಂಕಿತೆಯ ಮನವೊಲಿಸಿದ ಜಿಲ್ಲಾಧಿಕಾರಿ:

ಸೋಂಕು ದೃಢಪಟ್ಟ ಬಳಿಕ ಮನೆಯಲ್ಲಿಯೇ ಐಸೋಲೇಷನ್ ಇದ್ದ ಮಹಿಳೆಯೊಬ್ಬರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಕೋವಿಡ್ ಆರೈಕೆ ಕೇಂದ್ರದ ಬಗ್ಗೆ ಮಾಹಿತಿಯನ್ನು ನೀಡಿ ಆರೈಕೆ ಕೇಂದ್ರದಲ್ಲಿ ದಾಖಲಾಗುವಂತೆ ಮನವೊಲಿಸಿದರು.

ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಸೂಕ್ತ ಅಂತರ ಕಾಯ್ದುಕೊಳ್ಳುವ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸಿದರು.
ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ತಹಶಿಲ್ದಾರ ಕುಲಕರ್ಣಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');