ನಾಳೆಯಿಂದ 5 ದಿನ “100 ನಾಟೌಟ್” ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ

0

ಬೆಂಗಳೂರು: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿಯಲು ನಿರ್ಧರಿಸಿರುವ ಕಾಂಗ್ರೆಸ್ ಗ್ರಾಮ ಪಂಚಾಯತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೂ “100 ನಾಟೌಟ್” ಪ್ರತಿಭಟನೆ ನಡೆಸಲು ಮುಂದಾಗಿದೆ. ನಾಳೆಯಿಂದ ಐದು ದಿನದಲ್ಲಿ ಐದು ಸಾವಿರ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಮನೆ ಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ. ಕಳೆದ 13 ತಿಂಗಳಿನಲ್ಲಿ ಪೆಟ್ರೋಲ್ 25.72 ರೂ. ಡೀಸೆಲ್ 23.93 ರೂಪಾಯಿಗೆ ಹೆಚ್ಚಾಗಿದೆ. ಕಳೆದ ಐದು ತಿಂಗಳಿನಲ್ಲಿ 43 ಬಾರಿ ದರಗಳನ್ನು ಹೆಚ್ಚಿಸಲಾಗಿದೆ. ಇದು ಕೇಂದ್ರ ಸರ್ಕಾರದ ಕೃಪಾಪೋಷಿತ ಲೂಟಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ:
“ತೈಲ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ರೂಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿಯೇ ನಾಳೆಯಿಂದ ಕಾಂಗ್ರೆಸ್ ಅಖಾಡಕ್ಕಿಳಿಯುತ್ತಿದೆ. 11 ರಂದು ಜಿಲ್ಲಾ ಕೇಂದ್ರಗಳಲ್ಲಿ, ಜೂ.12ರಂದು ತಾಲ್ಲೂಕು ಕೇಂದ್ರಗಳಲ್ಲಿ, 13 ರಂದು ಹೋಬಳಿ ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ, 14ರಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆಟ್ರೋಲ್ ಬಂಕ್ ಗಳ ಎದುರು ಪ್ರತಿಭಟನೆ ನಡೆಯಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಕೊನೆಯ ದಿನವಾದ ಜೂ.15 ರಂದು ರಾಜ್ಯದ ಎಲ್ಲ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಜೂನ್ 16ರಂದು ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರ ವಿಧಿಸುತ್ತಿರುವ ದುಬಾರಿ ತೆರಿಗೆಯನ್ನು ಕಡಿತ ಮಾಡಲು ಒತ್ತಡ ಹೇರುವಂತೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ಕೋವಿಡ್ ನಿಯಮಗಳ ಪಾಲನೆಗೆ ಸೂಚನೆ:

ಪ್ರತಿಭಟನೆಯ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು, ತೈಲ ಬೆಲೆ ಏರಿಕೆಯನ್ನು ವಿರೋಧಿಸುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಬೇಕು. ಸ್ಥಳೀಯ ಹಿರಿಯ ನಾಯಕರು, ಪಕ್ಷದ ಪದಾಧಿಕಾರಿಗಳು, ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಆಭ್ಯರ್ಥಿಗಳು, ಮುಂಚೂಣಿ ಘಟಕ, ವಿಭಾಗಗಳ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಸಂಸದರು, ಮಾಜಿ ಸಂಸದರು ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಪ್ರತಿಯೊಂದು ಕ್ಷೇತ್ರಕ್ಕೂ ನಿಯೋಜಿತ ಸಂಯೋಜಕರು ಮತ್ತು ಮಾಜಿ ಉಸ್ತುವಾರಿ ಪದಾಧಿಕಾರಿಗಳು ಐದು ದಿನಗಳ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆ, ಬ್ಲಾಕ್ ಸಮಿತಿಗಳ ಅಧ್ಯಕ್ಷರು ಪ್ರತಿಭಟನೆಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಲಾಗಿದೆ.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');