ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥವಾಗಲಿ: ಡಿಸಿಎಂ.ಜಿ.ಹಿರೇಮಠ

0
🌐 Belgaum News :

ಬೆಳಗಾವಿ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2007 ರಿಂದ 2021 ರವರೆಗೆ ದಾಖಲಾಗಿರುವ  ಪ್ರಕರಣಗಳ ಪೈಕಿ ಇತ್ಯರ್ಥಕ್ಕಿಂತ ಬಾಕಿ ಪ್ರಕರಣಗಳ ಸಂಖ್ಯೆ ಜಾಸ್ತಿ ಇರುವುದರಿಂದ ಇಂತಹ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೂಚನೆ ನೀಡಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ, ಸಖಿ, ಬಾಲ್ಯವಿವಾಹ, ಪೋಷಣ ಅಭಿಯಾನ ಹಾಗೂ ಮಾತೃವಂದನಾ ಯೋಜನೆ ಅನುಷ್ಠಾನ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಆ.2) ಜರುಗಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೌಟುಂಬಿಕ ಹಿಂಸೆ ಪ್ರಕರಣಗಳನ್ನು ಲೋಕ‌ಅದಾಲತ್ ಮೂಲಕ ಇತ್ಯರ್ಥಪಡಿಸಲು ಕಕ್ಷಿದಾರರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ವ್ಯವಸ್ಥೆ ಕಲ್ಪಿಸಲು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಒಟ್ಟಾರೆ 251 ಪ್ರಕರಣಗಳ ಪೈಕಿ ಪ್ರಕರಣಗಳು ಬಾಕಿ 142 ಉಳಿದಿದ್ದು, ಇದುವರೆಗೆ 9 ಪ್ರಕರಣಗಳು ಮಾತ್ರ ಇತ್ಯರ್ಥಪಡಿಸಲಾಗಿದೆ. ಆದ್ದರಿಂದ ಪ್ರಕರಣಗಳ ಇತ್ಯರ್ಥಕ್ಕೆ ಮುತುವರ್ಜಿ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಕೌಟುಂಬಿಕ ಹಿಂಸೆ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಕಾನೂನು ಪ್ರಾಧಿಕಾರದಿಂದ ನೇಮಿಸಲಾದ ವಕೀಲರು ಹಾಜರಾಗಲು ಕ್ರಮವಹಿಸುವಂತೆ ಕೋರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸಖಿ ಒನ್‌ ಸ್ಟಾಪ್ ಸೆಂಟರ್ ಕಟ್ಟಡ ನಿರ್ಮಾಣ ಕಾರ್ಯ ಆಗಸ್ಟ್ 30 ರೊಳಗೆ ಪೂರ್ಣಗೊಳಿಸಬೇಕು. ಅಗತ್ಯ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ  ಸೂಚನೆ ನೀಡಿದರು.

ಬಾಲ್ಯವಿವಾಹ- ಕಾವಲುಸಮಿತಿ ಸಭೆ ನಡೆಸಲು ಸೂಚನೆ:

ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ಧೇಶದಿಂದ ಗ್ರಾಮ ಮಟ್ಟದಲ್ಲಿ ಗ್ರಾಮ‌ ಪಂಚಾಯತ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಕಾವಲುಸಮಿತಿಯ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ಪತ್ರೆಗೆ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪೋಷಣ ಅಭಿಯಾನ ಅತ್ಯುತ್ತಮ ಕಾರ್ಯವಾಗಿದೆ. ಇದಕ್ಕಾಗಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ಮಾತೃವಂದನಾ ಯೋಜನೆಯಡಿ 1.28 ಲಕ್ಷ ಫಲಾನುಭವಿಗಳಿಗೆ 43 ಕೋಟಿ ರೂಪಾಯಿ ಅವರ ಖಾತೆಗಳಿಗೆ ಜಮೆಯಾಗಿರುತ್ತದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಒದಗಿಸಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕು; ಅನಾಥ ಮಕ್ಕಳಿಗೆ ಕೇಂದ್ರ-ರಾಜ್ಯ ಸರ್ಕಾರದ‌ ನೆರವು:

ಕೋವಿಡ್ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡಿರುವ ಮಕ್ಕಳಿಗೆ ರಾಜ್ಯ ಸರಕಾರದ ಬಾಲಸೇವಾ ಯೋಜನೆಯಡಿ ಪ್ರತಿ ತಿಂಗಳು 3500 ರೂಪಾಯಿ ನೆರವು ಹಾಗೂ ಪಿಎಂ ಕೇರ್ಸ್ ಫಂಡ್ ನಿಂದ 2023 ರ ವೇಳೆಗೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿರುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿ ತಾಲ್ಲೂಕು ಮಟ್ಟದಲ್ಲಿ ಹೆಚ್ಚಿನ ಪ್ರಚಾರ ಒದಗಿಸುವ ಮೂಲಕ ಅನಾಥ ಮಕ್ಕಳಿಗೆ ನೆರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಸಂಭವನೀಯ ಕೋವಿಡ್ ಮೂರನೇ ಸಂದರ್ಭದಲ್ಲಿ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕೆಲಸ ಮಾಡಬೇಕು ಎಂದು ತಿಳಿಸಿದರು.

ಮಕ್ಕಳ ಸಂಖ್ಯೆ ಆಧಾರದ ಮೇಲೆ ತಾಲ್ಲೂಕುವಾರು ಅಗತ್ಯ ಔಷಧಿ ಸಾಮಗ್ರಿಗಳನ್ನು ದಾಸ್ತಾನು ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಎಂದರು.ಕೆಲಸದ  ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿಸಿದಂತೆ ಸರಕಾರದ ಮಾರ್ಗದರ್ಶನದ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸಭೆಯನ್ನು ನಿರ್ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜ ವರವಟ್ಟಿ ಅವರು, ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ಧೇಶದಿಂದ ಗ್ರಾಮ ಮಟ್ಟದಲ್ಲಿ ಗ್ರಾಮ‌ ಪಂಚಾಯತ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾವಲುಸಮಿತಿ ರಚಿಸಲಾಗಿದೆ ಎಂದು ವಿವರಿಸಿದರು.

ನೊಂದ ಮಹಿಳೆಯರಿಗೆ ತಾಲ್ಲೂಕು ಮಟ್ಟದಲ್ಲಿ ಇರುವ ಸಾಂತ್ವನ ಕೇಂದ್ರದಲ್ಲಿ ತಾತ್ಕಾಲಿಕ ಆಶ್ರಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ನಂತರ ಅವರನ್ನು ಸ್ವಾಧಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ವರವಟ್ಟಿ ತಿಳಿಸಿದರು.

ಅಪೌಷ್ಟಿಕತೆ ನಿವಾರಣೆಗೆ ಚ್ಯವನಪ್ರಾಶ್, ಚಿಕ್ಕಿ ಸೇರಿದಂತೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ.

ಸಖಿ ಒನ್ ಸ್ಟಾಪ್ ಸೆಂಟರ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳ್ಳಲಿದೆ ಎಂದರು.
ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟಾರೆ 145 ಪ್ರಕರಣಗಳು ದಾಖಲಾಗಿವೆ. ವೈದ್ಯಕೀಯ ತಪಾಸಣೆ, ಕೌನ್ಸಿಲಿಂಗ್ ಸೇರಿದಂತೆ ಎಲ್ಲ ನೆರವು‌ ಒದಗಿಸಲಾಗಿದೆ ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ವರವಟ್ಟಿ ವಿವರಿಸಿದರು.

ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿದರು.
ಈ ಯೋಜನೆಯಡಿ ಜಿಲ್ಲೆ ಶೇ.119 ರಷ್ಟು ಸಾಧನೆಗೈದಿದೆ ಎಂದು ವರವಟ್ಟಿ ಸಭೆಯಲ್ಲಿ ವಿವರಿಸಿದರು.

ಒನ್ ಸ್ಟಾಪ್ ಸೆಂಟರ್ ನಲ್ಲಿ ವೈದ್ಯಕೀಯ ವೃತ್ತಿ ಅನುಭವ ಹೊಂದಿರುವ ಸಿಬ್ಬಂದಿಯನ್ನು ನಿಯೋಜಿಸಿದರೆ ಪರಿಣಾಮಕಾರಿ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಅಭಿಪ್ರಾಯಪಟ್ಟರು. ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಹಿಳಾ ಕಲ್ಯಾಣ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');