Belagavi News In Kannada | News Belgaum

ಮತದಾರರಿಗೆ ಮತ ಚಲಾವಣೆ ಕುರಿತು ತರಬೇತಿ ನೀಡಲು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಸೂಚನೆ

ಬೆಳಗಾವಿ, ಡಿ.02: ವಿಧಾನ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸಲು ಇರುವ ಮತದಾರರಿಗೆ ಮತಚಲಾವಣೆ ಕುರಿತು ಸೂಕ್ತ ತರಬೇತಿಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್ . ವೆಂಕಟೇಶ್ ಕುಮಾರ್ ಸೂಚನೆ ನೀಡಿದರು.
ಮತದಾರರಿಗೆ ಮತ ಚಲಾವಣೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ (ಡಿ.2) ನಡೆದ ವಿಡಿಯೋ ಸಂವಾದದಲ್ಲಿ ಅವರು ಈ ಸೂಚನೆ ನೀಡಿದರು.
ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯ ಮತಗಳಿರುವುದರಿಂದ ಮತದಾನ ಪ್ರಕ್ರಿಯೆ ಭಿನ್ನವಾಗಿರುತ್ತದೆ. ಆದ್ದರಿಂದ ಎಲ್ಲಾ ಮತದಾರರಿಗೂ ಸೂಕ್ತ ತರಬೇತಿ ನೀಡುವ ಅಗತ್ಯವಿರುತ್ತದೆ.
ಪ್ರಾಶಸ್ತ್ಯ ಮತ ಇರುವುದರಿಂದ ಮತ ಚಲಾವಣೆಯಲ್ಲಿ ಯಾವುದೇ ಲೋಪಗಳ ಆದರೆ ಆ ಮತ ಅಸಿಂಧು/ ತಿರಸ್ಕರಿಸಲಾಗುತ್ತದೆ. ಆದ್ದರಿಂದ ಈ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು ಪ್ರಾಯೋಗಿಕವಾಗಿ ಮತಚಲಾವಣೆ ಬಗ್ಗೆ ತರಬೇತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಅರ್ಹ ಮತದಾರರಿಗೆ ನಿಗದಿತ ಅವಧಿಯಲ್ಲಿ ತರಬೇತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ  ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಸುವ ಉದ್ದೇಶದಿಂದ ಮೈಕ್ರೋ ಅಬ್ಸರ್ವರ್ ನೇಮಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ವಿಡಿಯೋ ಚಿತ್ರೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಶಂಕರಪ್ಪ ವನಕಿಹಾಳ, ಮಹಾನಗರ ಪಾಲಿಕೆ ಆಯುಕ್ತರಾದ ಡಾ. ರುದ್ರೇಶ್ ಘಾಳಿ, ಚುನಾವಣಾ ತರಬೇತುದಾರರಾದ ಎನ್.ವಿ ಶಿರಗಾಂವಕಾರ್ ಉಪಸ್ಥಿತರಿದ್ದರು. ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮುಖ್ಯ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.