Belagavi News In Kannada | News Belgaum

ಎಂಇಎಸ್ ಸಂಘಟನೆಯನ್ನು ಎರಡು ದಿನದೊಳಗೆ ನಿಷೇಧಿಸಬೇಕು. ವಾಟಾಳ್ ನಾಗರಾಜ್ ಸರ್ಕಾರಕ್ಕೆ ಗಡುವು

ಬೆಂಗಳೂರು: ಎಂಇಎಸ್ ಸಂಘಟನೆಯನ್ನು ಎರಡು ದಿನದೊಳಗೆ ನಿಷೇಧಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ರಾಯಣ್ಣ ಪ್ರತಿಮೆ ಭಗ್ನ ಗೊಳಿಸಿರುವುದು ಸೇರಿದಂತೆ ನಿರಂತರ ನಾಡದ್ರೋಹಿ ಕೃತ್ಯ ವೆಸಗುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕರವೇ ಅಧ್ಯಕ್ಷ ಪ್ರವೀಣ್‍ಕುಮಾರ್ ಶೆಟ್ಟಿ ಮುಂತಾದವರ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದ ಮುಖಂಡರು ಎರಡು ದಿನದೊಳಗೆ ಎಂಇಎಸ್ ಸಂಘಟನೆಯನ್ನು ನಿಷೇಸಬೇಕು. ಇಲ್ಲದಿದ್ದರೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂಬ ಎಚ್ಚರಿಕೆ ನೀಡಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಮೈಸೂರು ಬ್ಯಾಂಕ್ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯ ಹೋರಾಟಗಾರ. ನಮ್ಮ ದೇಶದ ಆಸ್ತಿ, ಅವರ ಪ್ರತಿಮೆಯನ್ನು ವಿರೂಪಗೊಳಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಎಂಇಎಸ್‍ನವರು ಧಕ್ಕೆ ತಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನದೊಳಗೆ ಈ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ಪ್ರವೀಣ್‍ಕುಮಾರ್ ಶೆಟ್ಟಿ, ಸಾ.ರಾ.ಗೋವಿಂದು, ಮಂಜುನಾಥ್ ದೇವು, ಗಿರೀಶ್ ಗೌಡ ಸೇರಿದಂತೆ ವಿವಿಧ ಮುಖಂಡರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ನಾವೆಲ್ಲರೂ ನಾಡದ್ರೋಹಿಗಳ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.