Belagavi News In Kannada | News Belgaum

ಮತಾಂತರ ನಿಷೇಧ ವಿಧೇಯಕಕ್ಕೆ ಕೊನೆಗೂ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಇದರಿಂದ ಸದನದಲ್ಲಿ ಕೋಲಾಹಲ

ಬೆಳಗಾವಿ: ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ಕೊನೆಗೂ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಇದರಿಂದ ಸದನದಲ್ಲಿ ಕೋಲಾಹಲ ಉಂಟಾದ ಕಾರಣ 10 ನಿಮಿಷ ಕಲಾಪವನ್ನು ಮುಂದೂಡಲಾಯಿತು. ವಿರೋಧ ಪಕ್ಷಗಳ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರ ದೊರೆತಿದೆ. ಕರ್ನಾಟಕ ಸರ್ಕಾರವು ಮಂಗಳವಾರ (ಡಿ.21) ವಿಧಾನಸಭೆಯಲ್ಲಿ ಮಂಡಿಸಿದ್ದ ಮತಾಂತರ ನಿಷೇಧ ಕಾಯ್ದೆಗೆ ಗುರುವಾರ (ಡಿ.23) ಸದನದ ಅನುಮೋದನೆ ದೊರೆಯಿತು. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ವಿಧೇಯಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧ್ವನಿಮತಕ್ಕೆ ಹಾಕಿದರು. ಧ್ವನಿಮತದ ಮೂಲಕವೇ ವಿಧೇಯಕವನ್ನು ಸದನ ಅಂಗೀಕರಿಸಿತು.

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.
2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು
3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು
4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು
5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು
6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು
7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು
8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು
9) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮವಹಿಸುವುದು.