Belagavi News In Kannada | News Belgaum

ಪಾದಯಾತ್ರೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು: ಕೋವಿಡ್ ನೆಪ ಹೇಳಿಕೊಂಡು ಮೇಕೆದಾಟು ಪಾದಯಾತ್ರೆ ತಡೆಗಟ್ಟಲು ಸರ್ಕಾರ ಪ್ರಯತ್ನಿಸುವ ಸಾಧ್ಯತೆ ಇದೆ. ಆದರೆ, ನಾವು ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಪಾದಯಾತ್ರೆ ಮಾಡುತ್ತೇವೆ. ಅವರು ಏನನ್ನು ಬೇಕಾದರೂ ಮಾಡಿಕೊಳ್ಳಲಿ. ನಾವಂತೂ ಪಾದಯಾತ್ರೆ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೇಕೆದಾಟು ಯೋಜನೆ ಸಂಬಂಧ ನಡೆಸಿದ ಹೋರಾಟವನ್ನು ಕಾಂಗ್ರೆಸ್ ಪಕ್ಷ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ಈ ವಿಚಾರದಲ್ಲಿ ಜೆಡಿಎಸ್ ನವರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಮೇಕೆದಾಟು ಯೋಜನೆ ಹೊಸ ಯೋಜನೆಯೇನಲ್ಲ. ಅದು ಬಹಳ ಹಳೆಯ ದಾದ ಯೋಜನೆಯಾಗಿದೆ. 1968ರಲ್ಲಿ ನಿಜಲಿಂಗಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಕಾಂಗ್ರೆಸ್ ಈ ಯೋಜನೆಯ ಬಗ್ಗೆ ಪ್ರಸ್ತಾಪಿಸಿತ್ತು ಎಂದರು.
ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಆದರೆ ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ, ಅವರ ಅಧಿಕಾರಾವಧಿಯಲ್ಲಿ ಯೋಜನೆ ಮಾಡಿಲ್ಲ, ಇದು ಗಿಮಿಕ್ ಎನ್ನುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಬಹಳ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ನಾವು ಸರ್ಕಾರವನ್ನು ಎಚ್ಚರಿಸುವಂತಹ ಕೆಲಸ ಮಾಡುತ್ತಾ ಬಂದಿದ್ದೇವೆ. ನಮ್ಮ ಎಲ್ಲಾ ಹೋರಾಟಗಳು ಫಲಪ್ರದ ವಾಗುತ್ತಿವೆ. ಇದು ದಪ್ಪ ಚರ್ಮದ ಸರ್ಕಾರ. ಹೀಗಾಗಿ ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು.
ಪರಿಣಾಮ ಇತ್ತೀಚೆಗೆ ನಡೆದ ಬಹುತೇಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನೆಲೆಗೆ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದವರು ತಿಳಿಸಿದರು.
ಮೇಕೆದಾಟು ಯೋಜನೆ ಪಾದಯಾತ್ರೆ ಯನ್ನು ರಾಜಕಾರಣಕ್ಕಾಗಿ ಎಂದು ಬಿಂಬಿಸುತ್ತಿದ್ದಾರೆ. ನಮಗೆ ಅಧಿಕಾರ ಒಂದೇ ಮುಖ್ಯವಲ್ಲ. ನಮಗೆ ಸಾಮಾಜಿಕ ಕಳಕಳಿಯಿದೆ. ಬಹುತೇಕ ವಿಷಯಗಳಲ್ಲಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲೂ ನಾವು ಹೋರಾಟ ಮಾಡಿದ್ದೇವೆ ಎಂದರು.
ಕುಡಿಯುವ ನೀರು ಯೋಜನೆಗೆ ಎನ್ ಒಸಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಕೇವಲ ಪರಿಸರ ಇಲಾಖೆಯ ಅನಮತಿ ಅಗತ್ಯವಿದೆ. ರಾಮನಗರ ಜಿಲ್ಲೆಯ ಕನಕಪುರ ಹಾಗೂ ಚಾಮರಾಜನಗರ ಜಿಲ್ಲೆಯ ಹನೂರಿನ ನಡುವೆ ಈ ಯೋಜನೆ ಬರಲಿದೆ ಎಂದವರು ವಿವರಿಸಿದರು.
ನಮ್ಮ ಪಾದಯಾತ್ರೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಆದರೆ ನಾವು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಹೋರಾಟದಲ್ಲಿ ಭಾಗಿಯಾ ಗುವಂತೆ ಸಮಾಜದ ಎಲ್ಲಾ ಸ್ಥಳದ ಮುಖಂಡರು, ನಾಯಕರು, ಮಠಾಧಿಪತಿಗಳು, ಹಾಲಿ ಮಾಜಿ ಶಾಸಕರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಂದರೆ ರಾಜ್ಯದ 2.5 ಕೋಟಿ ಜನರಿಗೆ ಅನುಕೂಲವಾಗಲಿದೆ. ಮೇಕೆದಾಟು ಯೋಜನೆ ವಿಳಂಬವಾಗಲು ಬಿಜೆಪಿ ಯವರೇ ಕಾರಣರಾಗಿದ್ದಾರೆ ಎಂದು ಆರೋಪಿಸಿದ ಅವರು, ಈಗಿನ ಪರಿಸ್ಥಿಯಲ್ಲಿ ಮೇಕೆದಾಟು ಯೋಜನೆಯನ್ನು ತಡೆಯಲು ತಮಿಳುನಾಡಿನವರಿಗೆ ಸಾಧ್ಯವೇ ಇಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವ ನಾರಾಯಣ್ , ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ಉಪಸ್ಥಿತರಿದ್ದರು.//////