Belagavi News In Kannada | News Belgaum

ಗಣರಾಜ್ಯೋತ್ಸವ ಪೂರ್ವಭಾವಿ ಸಭೆ : ಗಣರಾಜ್ಯೋತ್ಸವ ಸರಳ ಆಚರಣೆ

ಬೆಳಗಾವಿ;  ಜಿಲ್ಲೆಯಲ್ಲಿ ಕೋವಿಡ್-19 ಹಾಗೂ ರೂಪಾಂತರ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ ಜನವರಿ 26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಜ.13) ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಕಾರಣದಿಂದ ಈ ಬಾರಿ ಹಿರಿಯ ಸ್ವಾತಂತ್ರ್ಯ ಯೋಧರಿಗೆ ಗೌರವಾರ್ಪಣೆ ಇರುವುದಿಲ್ಲ.
ಕಳೆದ ವರ್ಷದಂತೆ ಈ ಬಾರಿಯೂ ಶಾಲಾ ಮಕ್ಕಳಿಂದ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪರೇಡ್ ಕೂಡ ನಡೆಯುವುದಿಲ್ಲ ಎಂದು ತಿಳಿಸಿದರು.

ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿರುವುದರಿಂದ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು.  ಪರೇಡ್ ಗೆ ಸಂಬಂಧಿಸಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಪೂರ್ವಾಭ್ಯಾಸ ನಡೆಸಬೇಕು.

ಸಮಾರಂಭದ ವೇದಿಕೆಯ ಸಿದ್ಧತೆ, ಆಸನ, ಧ್ವನಿವರ್ಧಕ, ಕುಡಿಯುವ ನೀರು ಮತ್ತಿತರ ಮೂಲಸೌಕರ್ಯವನ್ನು ಒದಗಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು.
ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲ ದೇವಾಲಯ, ಮಸೀದಿ, ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಕ್ರಮ‌ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ಕಾರಿ ಕಚೇರಿಗಳಿಗೂ ಕೂಡ ದೀಪಾಲಂಕಾರ ಮಾಡಬೇಕು. ಅದೇ ರೀತಿ ‌ಸಾರ್ವಜನಿಕರು ಕೂಡ ತಮ್ಮ ಮನೆ, ಅಂಗಡಿ-ಮುಂಗಟ್ಟುಗಳನ್ನು‌ ಕೂಡ ಅಲಂಕಾರ ಮಾಡಬೇಕು. ಗಣರಾಜ್ಯೋತ್ಸವ ದಿನ ಆಸಕ್ತ ಸಂಘ-ಸಂಸ್ಥೆಗಳು ಆಸ್ಪತೆಯ ರೋಗಿಗಳಿಗೆ ಹಣ್ಣುಗಳನ್ನು ಹಂಚಬಹುದು ಎಂದು ತಿಳಿಸಿದರು.
ಧ್ವಜಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ:
ಸರ್ಕಾರಿ ಕಚೇರಿಗಳಲ್ಲಿ ಧ್ವಜ ಕಟ್ಟುವುದಕ್ಕೆ ಸಂಬಂಧಿಸಿದಂತೆ ಭಾರತ ಸೇವಾದಳದ ವತಿಯಿಂದ ತರಬೇತಿ ನೀಡಲಾಗುವುದು. ದ್ವಜ ಕಟ್ಟಲು ತರಬೇತಿ ಅಗತ್ಯವಿರುವವರು ಭಾರತ ಸೇವಾದಳವನ್ನು ಸಂಪರ್ಕಿಸಿ ತರಬೇತಿ ಪಡೆದುಕೊಳ್ಳಬೇಕು.

ಜಿಲ್ಲೆಯ ಎಲ್ಲ ಕಡೆಗಳಲ್ಲೂ ಧ್ವಜಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು ಈ ಕುರಿತು ವಿಶೇಷ ಕಾಳಜಿ ವಹಿಸಿ, ರಾಷ್ಟ್ರಧ್ವಜಕ್ಕೆ ಯಾವುದೇ ಕಾರಣಕ್ಕೂ ಅವಮಾನ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು‌ ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಕೋವಿಡ್-19 ಮಾರ್ಗಸೂಚಿಗಳ ಅನ್ವಯ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು  ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರು ಕೂಡ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಪೊಲೀಸ್ ಆಯುಕ್ತರಾದ ಡಾ. ಎಂ. ಬಿ ಬೋರಲಿಂಗಯ್ಯ ಅವರು ತಿಳಿಸಿದರು.

ಸಭೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಅಂಗವಾಗಿ ಸೂರ್ಯ ನಮಸ್ಕಾರ ಕುರಿತ ಪೋಸ್ಟರ್ ಬಿಡುಗಡೆ ಮಾಡಿದರು.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಹೆಚ್ಚುವರಿ  ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾಂವಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ್ ಘಾಳಿ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
/////