ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಲು ಬಿ.ಕೆ. ಹರಿಪ್ರಸಾದ್ ಒತ್ತಾಯ

ಬೆಂಗಳೂರು: ರಾಷ್ಟ್ರ ಧ್ವಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹದ ಆರೋಪದಡಿ ಪ್ರಕರಣ ದಾಖಲಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಹೇಳಿಕೆ ರಾಷ್ಟ್ರದ್ರೋಹವಾಗಿದೆ. ಈ ಹಿಂದೆ ರೈತ ಚಳವಳಿಯ ವೇಳೆ ಕೆಂಪುಕೋಟೆಯ ಮೇಲೆ ರೈತ ಧ್ವಜ ಹಾರಿಸಿದವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಈಶ್ವರಪ್ಪ ಕೂಡ ಕೆಂಪು ಕೋಟೆ ಮೇಲೆ ಭಗವಾಧ್ವಜ ಹಾರಿಸುವ ಪ್ರಸ್ತಾಪ ಮಾಡಿದ್ದಾರೆ. ಅವರ ವಿರುದ್ಧ ಕೂಡ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.
ಹಿಜಾಬ್ ಸೇರಿದಂತೆ ಹಲವಾರು ವಿಷಯಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಹೆಣ್ಣು ಮಕ್ಕಳನ್ನು ಅವಹೇಳನ ಮಾಡುತ್ತಿದೆ. ಅವರ ಹಕ್ಕುಗಳನ್ನು ಧಮನಿಸುತ್ತಿದೆ. ಇದನ್ನು ವಿರೋಧಿಸಿ ನಾವು ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.//////