Belagavi News In Kannada | News Belgaum

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿವಿಗಳಲ್ಲಿ ಪ್ರವೇಶ : ಡೀಮ್ಡ್ ಅಧ್ಯಕ್ಷ ಡಾ. ಪ್ರಭಾಕರ ಕೋರೆ

ಬೆಳಗಾವಿ: ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗಿ ವಾಪಸ್ಸಾಗಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ನೀಡಲಾಗುತ್ತದೆ ಎಂದು ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ತಿಳಿಸಿದ್ದಾರೆ.
ಉಕ್ರೇನ್‌ನಲ್ಲಿ ಯುದ್ಧ ಆರಂಭವಾದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಶಿಕ್ಷಣ ಅರ್ಧಕ್ಕೆ ತೊರೆದು ಬಂದಿರುವ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಲಾಗುತ್ತದೆ. ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದ ಸಾವಿರಾರು ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಕಾರಣಕ್ಕೆ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅವಕಾಶ ನೀಡಲಾಗುತ್ತಿದೆ ಎಂದಿದ್ದಾರೆ.
ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಮೂಲಕ ಸಾವಿರಾರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆತರುವಲ್ಲಿ ಅಪ್ರತಿಮವಾದ ಕಾರ್ಯವನ್ನು ನಿರ್ವಹಿಸಿದ್ದಾರೆ. ತನ್ನಿಮಿತ್ತ ಪ್ರಧಾನಿಯವರಿಗೆ ಹಾಗೂ ಅವರ ಸಮಸ್ತ ತಂಡಕ್ಕೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ಪ್ರಧಾನಿ ಸೂಚಿಸಿರುವಂತೆ ಉಕ್ರೇನ್‌ನಲ್ಲಿ ಭಾರತೀಯ ವೈದ್ಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲಿಯೇ ತೊರೆದು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಮುಂದಿನ ಕಲಿಕೆಗೆ ಯಾವುದೇ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಸೂಚನೆ ಹಾಗೂ ನಿಯಮಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ಕಲಿಯುತ್ತಿದ್ದ ಭಾರತೀಯ ವೈದ್ಯ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಪ್ರವೇಶವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ/////