Belagavi News In Kannada | News Belgaum

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕುರಿತ ಪೂರ್ವಭಾವಿ ಸಭೆ

ಬೆಳಗಾವಿ: ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಆಚರಣೆ ಏ.14 ರಂದು ನಡೆಯಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ  ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿನಡೆದ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಉದ್ಯಾನವನದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಲಾಗುವುದು. ಡಾ.ಬಿ.ಆರ್ ಅಂಬೇಡ್ಕರ್ ಉದ್ಯಾನವನದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಕಾರ್ಯಕ್ರಮಕ್ಕೆ ಅವಶ್ಯವಿರುವ ಪೆಂಡಾಲ್, ವೇದಿಕೆ, ಆಸನಗಳ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಬೇಕು ಹಾಗೂ ಉದ್ಯಾನವನವನ್ನು ಸ್ವಚ್ಛಗೊಳಿಸಬೇಕು ಎಂದು ಹೇಳಿದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ರಸ್ತೆಗೆ ದೀಪಾಲಂಕಾರ ಹಾಗೂ ನಗರದ ಪ್ರಮುಖ ವೃತ್ತಗಳನ್ನು ಅಲಂಕರಿಸಿ ಬ್ಯಾನರ್ ಕಟ್ಟುವ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಸಲು ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಆದರ್ಶಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ ಉಪನ್ಯಾಸಕರ ಆಯ್ಕೆ ಮಾಡಬೇಕು ಎಂದು ಅಂಬೇಡ್ಕರ್ ಸಂಘಟನೆಯ ಮುಖಂಡರಿಗೆ ತಿಳಿಸಿದರು.ಧರ್ಮವೀರ ಸಂಭಾಜಿ ವೃತ್ತದಿಂದ, ಕಿರ್ಲೋಸ್ಕರ್ ರೋಡ್ ರಾಮದೇವ ಗಲ್ಲಿ, ಖಡೆಬಜಾರ್ ಮಾರ್ಗವಾಗಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದ ವರೆಗೆ ರೂಪಕ ವಾಹನಗಳ ಮೆರವಣಿಗೆ ಮಾಡಲಾಗುವುದು.

ಜಯಂತಿ ಆಚರಣೆ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಉದ್ಯಾನವನದಲ್ಲಿ ಬೆಳಿಗ್ಗೆ ಅಲ್ಪೋಪಹಾರ ಹಾಗೂ ಕುಡಿಯುವ ನೀರು, ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾ ಪ್ರದರ್ಶನಕ್ಕಾಗಿ ಸ್ಥಳೀಯ 10 ಉತ್ತಮ ಕಲಾ ತಂಡಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಶಾಲಾ ಕಾಲೇಜು, ಗ್ರಾಮ ಪಂಚಾಯತ ಮತ್ತು ಸಹಕಾರ ಸಂಘ ಸಂಸ್ಥೆಗಳಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುವುದು. ಖಾಸಗಿ ಶಾಲಾ ಕಾಲೇಜುಗಳಲ್ಲಿ ಕೂಡ ಜಯಂತಿ ಆಚರಣೆ ಕಡ್ಡಾಯವಾಗಿರುತ್ತದೆ. ಪ್ರತಿವರ್ಷದಂತೆ ಜಯಂತಿ ಆಚರಣೆ ದಿನದಂದು ಮದ್ಯಪಾನ ಮಾರಾಟ ನಿಷೇಧಿಸಲಾಗುವುದು. ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 5 ಎಸೆಸೆಲ್ಸಿ ಹಾಗೂ 5 ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಈ ವೇಳೆ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಉಮಾ ಸಾಲಿಗೌಡರ, ಡಿ.ಸಿ.ಪಿ ರವೀಂದ್ರ ಗಡಾದಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು, ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.