Belagavi News In Kannada | News Belgaum

ಪರಿಶಿಷ್ಟ ಸಮುದಾಯಗಳ ದೌರ್ಜನ್ಯ ತಡೆಗೆ ಸೂಕ್ತ ಕ್ರಮ

ಬೆಳಗಾವಿ:  ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪರಿಶಿಷ್ಟ ಸಮುದಾಯಗಳ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡಲಾಗುವುದು ಹಾಗೂ ಅವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಮಾ.29) ಪರಿಶಿಷ್ಟ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳ ಅನ್ವಯ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಸಮುದಾಯದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯ ತಡೆಗೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ನ್ಯಾಯ ಒದಗಿಸಲು ಕಾನೂನು ಸಲಹೆ ನೀಡಬೇಕು. ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನರಿಗೆ ಸ್ಮಶಾನ ಭೂಮಿ ಇಲ್ಲದಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಸೂಕ್ತ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಲು ತಹಶೀಲ್ದಾರಗಳಿಗೆ ಸೂಚನೆ ನೀಡಿದರು.

ಚಿಕ್ಕೋಡಿ, ಅಥಣಿ, ರಾಯಬಾಗ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ವಾಸವಿರುವ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರಾತಿಗಾಗಿ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

ನಗರದ ವೃತ್ತಕ್ಕೆ ವೀರ ಮದಕರಿ ನಾಯಕ ಹೆಸರು ನಾಮಕರಣ:

ಕಳೆದ 2 ವರ್ಷಗಳಿಂದ ನಗರದ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕ ಹೆಸನಾಮಕರಣ ಮಾಡಬೇಕು ಎಂದು ಬೇಡಿಕೆ ಇದೆ. ಈ ಬಾರಿ ಪ್ರಮುಖ ವೃತ್ತಗಳಲ್ಲಿ ಒಂದಾದ ಆರ್.ಪಿ.ಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ನಾಮಕರಣ ಮಾಡಬೇಕು ಎಂದು ವಿಜಯ ತಳವಾರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಈ ಕುರಿತು ಯಾವುದೇ ಗೊಂದಲಗಳು ಇದ್ದಲ್ಲಿ  ಶೀಘ್ರವೇ ಪರಿಹರಿಸಬೇಕು ಮತ್ತು ಆರ್.ಪಿ.ಡಿ ವೃತ್ತಕೆ ವೀರ ಮದಕರಿ ನಾಯಕ ಹೆಸರು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಸಮುದಾಯದ ಜನರು ಹೆಚ್ಚು ಸಂಖ್ಯೆಯಲಿದ್ದು, ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳಲ್ಲಿ ಹೆಚ್ಚಿನ ಪ್ರಮಾಣದ ಆರ್ಥಿಕ ಮತ್ತು ಭೌತಿಕ ಗುರಿಯನ್ನು ನಿಗದಿಪಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಜನರಿಗೆ ಅನುಕೂಲವಾಗುವಂತೆ ಸ್ಮಶಾನ ಭೂಮಿ, ಬ್ಯಾಂಕ್ ಸಾಲ, ವಿದ್ಯಾರ್ಥಿ ವೇತನ ಮತ್ತಿತರ ಸರಕಾರಿ ಸೌಲಭ್ಯಗಳನ್ನು ಒದಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ತಿಳಿಸಿದರು.

ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ್ ಘಾಳಿ,

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾಂವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಡಿಸಿಪಿ ರವೀಂದ್ರ ಗಡಾದಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ

ನಾಮನಿರ್ದೇಶಿತ ಸದಸ್ಯರಾದ ಅಶೋಕ ಅಸೋಗಿ ಸಭೆಯಲ್ಲಿ ಉಪಸ್ಥಿತರಿದ್ದರು./////