Belagavi News In Kannada | News Belgaum

ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು; ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.

ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ./////