Belagavi News In Kannada | News Belgaum

13 ನೇ ರಾಷ್ಟ್ರೀಯ ಮತದಾರರ ದಿನಾಚರಣೆ

"ಮತ"ದ ಮಹತ್ವ ಅರಿತು ಜವಾಬ್ದಾರಿಯಿಂದ ಚಲಾಯಿಸಬೇಕು: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್

ಬೆಳಗಾವಿ, ಜ.25 : “ಮತ”ದ ಮಹತ್ವ ಅರಿತು ಜವಾಬ್ದಾರಿಯಿಂದ ಚಲಾಯಿಸಬೇಕು: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್

ಮತದಾನದ ಹಕ್ಕು ನಮ್ಮೆಲ್ಲರ ಸಂವಿಧಾನಬದ್ಧ ಹಕ್ಕಾಗಿದೆ. 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬರಿಗೂ ಈ ಹಕ್ಕು ಲಭಿಸುತ್ತದೆ. ಮತದಾರರು ತಮ್ಮ ಹಕ್ಕು ಹಾಗೂ ಅದರ ಮಹತ್ವ ಅರಿತುಕೊಂಡು ಜವಾಬ್ದಾರಿಯಿಂದ ಅದನ್ನು ಚಲಾಯಿಸಬೇಕು” ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ವಿ. ಅವರು ಕರೆ ನೀಡಿದರು.

ಜಿಲ್ಲಾಡಳಿತ, ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ(ಜ.25) ಏರ್ಪಡಿಸಲಾಗಿದ್ದ 13 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಮತದಾರರ ದಿನಾಚರಣೆಯ ಈ ಬಾರಿಯ ಧ್ಯೇಯವಾಕ್ಯ ” ಮತದಾನಕ್ಕಿಂತ ಇನ್ನೊಂದಿಲ್ಲ; ನಾನು ಖಚಿತವಾಗಿ ಮತದಾನ ಮಾಡುವೆ” ಎಂಬುದರ ಆಶಯವೇ ಮತದಾನವನ್ನು ಖಚಿತಪಡಿಸುವುದಾಗಿದೆ.
ಯುವ ಮತದಾರರು ಮೊದಲ ಬಾರಿ ಮತ ಚಲಾಯಿಸುವಾಗ ತಮ್ಮ ಮತದ ಮಹತ್ವವನ್ನು ಮನದಟ್ಟು ಮಾಡುವ ಕೆಲಸವನ್ನು ಚುನಾವಣಾ ಆಯೋಗದ ವತಿಯಿಂದ ಮಾಡಲಾಗುತ್ತಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಯಿಂದ ಲೋಕಸಭೆಯವರೆಗೂ ಪ್ರತಿಯೊಂದು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ.
ಚುನಾವಣೆ ವೇಳೆ ನಮ್ಮ ಹಕ್ಕು ಚಲಾಯಿಸುವಾಗ ಜಾಗ್ರತೆ ವಹಿಸಬೇಕು. ಕ್ಷೇತ್ರ ಕಿರಿದಾದಷ್ಟು ಮತದಾನ ಪ್ರಮಾಣ ಹೆಚ್ಚಾಗುವುದನ್ನು ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂದರ್ಭದಲ್ಲಿ ಗಮನಿಸಲಾಗಿದೆ. ಆದರೆ ಪ್ರತಿಯೊಂದು ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು.
ಮತದಾನದ ಬಗ್ಗೆ ಉದಾಸೀನತೆ ತೋರಿ ಮತದಾನದಿಂದ ದೂರ ಉಳಿದರೆ ನಮ್ಮ ಸಂವಿಧಾನಬದ್ಧ ಹಕ್ಕು ನಿರ್ಲಕ್ಷಿಸಿದಂತಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ವಿ. ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೂ ಆಗಿರುವ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ದರ್ಶನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಯುವ ಮತದಾರರಿಗೆ ಗುರುತಿನಚೀಟಿ ವಿತರಣೆ:

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಿಕೊಂಡಿರುವ ಯುವ ಮತದಾರರಿಗೆ ಮತದಾರರ ಗುರುತಿನಚೀಟಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಎಸ್.ವಿ. ಅವರು ವಿತರಿಸಿದರು.
ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ರಾಜೀವ್ ಕುಮಾರ್ ಅವರ ಸಂದೇಶದ ಧ್ವನಿಮುದ್ರಿಕೆಯನ್ನು ಪ್ರದರ್ಶಿಸಲಾಯಿತು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು, ಜಿಲ್ಲೆಯಲ್ಲಿ ಹೊಸದಾಗಿ 58 ಸಾವಿರ ಯುವ ಮತದಾರರು ಮತಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಮತದಾರರ ನೋಂದಣಿ ಪ್ರಕ್ರಿಯೆಗೆ ವಿಶೇಷ ಅಭಿಯಾನ ಹಮ್ಮಿಕೊಂಡ ಪರಿಣಾಮ ಹೆಚ್ಚಿನ ಪ್ರಮಾಣದಲ್ಲಿ ಯುವ ಮತದಾರರು ನೋಂದಾಯಿಸಿಕೊಂಡಿದ್ದು, ಇದುವರೆಗೆ ನೋಂದಣಿ ಮಾಡಿಸಿಕೊಳ್ಳದಿರುವ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಇದಲ್ಲದೇ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಅಶೋಕ ದುಡಗುಂಟಿ ಕರೆ ನೀಡಿದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ, ಉಪ ಪೆÇಲೀಸ್ ಆಯುಕ್ತರಾದ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ಬಲರಾಮ್ ಚವಾಣ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರಪ್ಪನವರ, ಜಿಲ್ಲಾ ಸ್ವೀಪ್ ರಾಯಭಾರಿ ರಾಘವೇಂದ್ರ ಅಣ್ವೇಕರ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ನಾಲತವಾಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಬಸವರಾಜ ಮಿಲ್ಲಾನಟ್ಟಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುನೀತಾ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು.

ಮತದಾರರ ಜಾಗೃತಿ ಜಾಥಾ:

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಚಾಲನೆ ನೀಡಿದರು.

ಅಲ್ಲಿಂದ ಆರಂಭಗೊಂಡ ಜಾಥಾ ಕಿತ್ತೂರು ಚೆನ್ನಮ್ಮ ವೃತ್ತ, ಕಾಕತಿವೇಸ್, ಖಡಕ್ ಗಲ್ಲಿ ಮೂಲಕ ಜಿಲ್ಲಾ ಪಂಚಾಯತಿ ಕಚೇರಿ ತಲುಪಿತು.
ಮಹಾನಗರ ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ನಾಲತವಾಡ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.