Belagavi News In Kannada | News Belgaum

ಪಂತಬಾಳೆಕುಂದ್ರಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ : ಸಿದ್ಧತೆ ಪರಿಶೀಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಸೇರಿ ಹಲವು ಗಣ್ಯರ ಉಪಸ್ಥಿತಿ; 30 ಸಾವಿರಕ್ಕಿಂತ ಹೆಚ್ಚು ಜನ ಸೇರುವ ನಿರೀಕ್ಷೆ

ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಮಾರ್ಚ್ 1ರಂದು ಬೆಳಗಾವಿ ಜಿಲ್ಲೆ ಪ್ರವೇಶಿಸಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಪಂತಬಾಳೆಕುಂದ್ರಿಯ  ವೈರ್ ಲೆಸ್ ಮೈದಾನಕ್ಕೆ ತೆರಳಿ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಮಾರ್ಚ್ 1ರಿಂದ 5ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಮೊದಲ ಕಾರ್ಯಕ್ರಮವೇ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ವಿನಯ ಕುಲಕರ್ಣಿ, ಜಮೀರ್ ಅಹ್ಮದ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ.
 ಬೃಹತ್ ಸಮಾವೇಶದ ಹಿನ್ನೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಶನಿವಾರ ಬೆಳಗ್ಗೆ ಪಂತಬಾಳೆಕುಂದ್ರಿಗೆ ತೆರಳಿ ಸಿದ್ಧತೆ ಪರಿಶೀಲಿಸಿ, ಸೂಚನೆಗಳನ್ನು ನೀಡಿದರು. ಮೈದಾನದಲ್ಲಿ 25 ಸಾವಿರ ಖುರ್ಚಿಗಳನ್ನು ಹಾಕಲಾಗುತ್ತಿದ್ದು, ಸಮಾವೇಶದಲ್ಲಿ 30 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ ಮೂಲಕವೇ ಪ್ರಜಾಧ್ವನಿ ಯಾತ್ರೆಯನ್ನು ಬೆಳಗಾವಿ ಜಿಲ್ಲೆಗೆ ಸ್ವಾಗತಿಸಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಈ ವೇಳೆ ತಿಳಿಸಿದರು.
ಈ ಸಮಯದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಗ್ರಾಮೀಣ ಭಾಗದ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು  ಉಪಸ್ಥಿತರಿದ್ದರು.