ಆರ್. ಧ್ರುವನಾರಾಯಣ್ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ : ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಧ್ರುವನಾರಾಯಣ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ ಎಂದಿದ್ದಾರೆ.
ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ಧತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಆರ್. ಧ್ರುವನಾರಾಯಣ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ತಮ್ಮ ಕಾರು ಚಾಲಕನಿಗೆ ಕರೆ ಮಾಡಿ ಆಸ್ಪತ್ರೆಗೆ ಹೋಗುತ್ತಿರುವಾಗ ಮಾರ್ಗಮಧ್ಯದಲ್ಲೇ 6.40 ರ ಸುಮಾರಿಗೆ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.