Belagavi News In Kannada | News Belgaum

ಕಾಂಗ್ರೆಸ್ ನ ಜನಪರ ಯೋಜನೆ ಜನತೆಗೆ ತಿಳಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹಾವೇರಿ: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೈಗೊಂಡ ಜನಪರ ಯೋಜನೆಗಳನ್ನು ಕಾರ್ಯಕರ್ತರು ಮನೆ ಮನೆಗೆ ತೆರಳಿ ನಾಡಿನ ಜನತೆಗೆ ತಿಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಜಿಲ್ಲೆಯ ಹಿರೇಕೆರೂರಿನಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಜೆಗಳ ಹಿತ ಮರೆತು ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಯ ಅನೈತಿಕ ಸರ್ಕಾರವನ್ನು ಕಿತ್ತಸೆದು ಜನಪರ ಕಾಳಿಜಿ ಇರುವ ಕಾಂಗ್ರೆಸ್ ಸರ್ಕಾರ ರಚನೆಗಾಗಿ ಪಕ್ಷವನ್ನು ಸಂಘಟಿಸಬೇಕೆಂದು ಕರೆ ನೀಡಿದರು.

ಕಾಂಗ್ರೆಸ್‌ ಸಾಮಾಜಿಕ ನ್ಯಾಯದ ಪರವಾಗಿರುವ ಪಕ್ಷ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಪಕ್ಷ. ದೇಶದಲ್ಲಿ 60 ವರ್ಷ ಅಧಿಕಾರದಲ್ಲಿದ್ದರು ಯಾರಿಗೂ ತೊಂದರೆ ನೀಡಲಿಲ್ಲ. ಆದರೆ ಕಳೆದ 9 ವರ್ಷದಿಂದ ದೇಶದಲ್ಲಿ ಅಧಿಕಾರದ ಚುಕ್ಕಾಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದರಿಂದ ಸಾಮಾನ್ಯ ಜನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಅನ್ನಭಾಗ್ಯ, ಇಂದಿರಾ ಕ್ಯಾಂಟಿನ್ ಸೇರಿ ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ತಂದಿದ್ದ ಯೋಜನೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯ 7ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿ ಬಿಜೆಪಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಿದೆ ಎಂದು ವಾಗ್ದಾಳಿ ನಡೆಸಿದರು. 

ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರುಗಳಾದ ಬಿ. ಝೆಡ್. ಜಮೀರ ಅಹ್ಮದ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು./////