20 ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮನ: ಸಲೀಂ ಅಹ್ಮದ್

ಬೆಳಗಾವಿ: ಯುವಕರಿಗೆ ಸ್ಪೂರ್ತಿ ನೀಡಲು ಮಾ.20 ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.
ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದೇವೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು.
ರಾಹುಲ್ ಗಾಂಧಿ ಅವರು ನಡೆಸಲಿರುವ ಸಮಾವೇಶದಲ್ಲಿ ಸುಮಾರು 10 ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ. ರೋಡ್ ಶೋ ನಡೆಸುವುದು ಬಿಡುವುದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.
ರಾಜ್ಯದಲ್ಲಿ 40% ಕಮಿಷನ್ ಸರಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ.ಬಿಜೆಪಿ ಸರಕಾರಕ್ಕೆ ಬದ್ಧತೆ ಇಲ್ಲ. ಇದರ ಕಾರ್ಯಕ್ರಮ ಭ್ರಷ್ಟಾಚಾರ. ಅಯೋಗ್ಯದ ಸರಕಾರ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಯಾವ ಮುಖದಲ್ಲಿ ಇಟ್ಟುಕೊಂಡು ಯಾತ್ರೆ ನಡೆಸುತ್ತಿದ್ದಾರೆ ಎಂದು ಹರಿಹಾಯ್ದರು.
ರಾಜ್ಯ ಬಿಜೆಪಿ ಸರಕಾರ ಭ್ರಷ್ಟಾಚಾರ,ಬೆಲೆ ಏರಿಕೆ ಬಗ್ಗೆ ಜನರ ಬಳಿ ಕ್ಷಮೆ ಕೇಳಬೇಕು.ಮಹದಾಯಿ ನದಿ ನೀರಾವರಿ ಕಾಮಗಾರಿ ಆರಂಭ, ಪ್ರತಿವರ್ಷ ಎರಡೂ ಕೋಟಿ ಉದ್ಯೋಗ ಕೊಡುವುದಾಗಿ ಹೇಳಿದ್ದರು.ನಮ್ಮ ಸರಕಾರ ಬಂದರೆ ಸ್ವರ್ಗ ತೋರಿಸುತ್ತೇನೆ ಎಂದಿದ್ದರು. ಎಲ್ಲಿದೆ ಸ್ವರ್ಗ ಎಂದು ಪ್ರಶ್ನಿಸಿದರು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದಾಗ ರೌಡಿ ಶೀಟರ್ ಗೆ ನಮಸ್ಕಾರ ಮಾಡುತ್ತಾರೆ.ರೌಡಿ ಶೀಟರ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ಅವಕಾಶ ನೀಡಿದ್ದು ಯಾಕೆ? ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಬೆಳಗಾವಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜು ಸೇಠ್, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ನಾಯಕರು ಇದ್ದರು.