ಅನುಷ್ಠಾನಗೊಳಿಸಬೇಕೆಂದು ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ

ಧಾರವಾಡ : ಸಫಾಯಿ ಕರ್ಮಚಾರಿಗಳ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕೆಂದು ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ, 2023ನೇ ಸಾಲಿನ 1ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಪೌರಕಾರ್ಮಿಕರಿಗೆ ಇಪಿಎಫ್ ಮೊತ್ತ ಪಾವತಿಸಲು ಕೆವೈಸಿ ಅಗತ್ಯವಿದ್ದು ಅಧಿಕಾರಿಗಳು ಕಾಳಜಿವಹಿಸಿ ಮಾಡಬೇಕು. ಸಫಾಯಿ ಕರ್ಮಚಾರಿಗಳು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇಎಸ್‍ಐ ಆಸ್ಪತ್ರೆಗೆ ಅಂಬುಲೆನ್ಸ್ ಅಗತ್ಯವಿದ್ದು, ಬೇಗನೆ ಕಾರ್ಯಾರಂಭ ಮಾಡುವಂತೆ ಹಾಗೂ ಅಲ್ಲಿನ ಸಿಬ್ಬಂದಿ ಸಮಸ್ಯೆ ಬಗೆಹರಿಸಿ, ಅಗತ್ಯ ತಜ್ಞ ವೈದ್ಯರನ್ನು, ಆರೋಗ್ಯ ಸಿಬ್ಬಂದಿಗಳನ್ನು ನೇಮಿಸುವಂತೆ ಇಎಸ್‍ಐ ಆಸ್ಪತ್ರೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಫಾಯಿ ಕರ್ಮಚಾರಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು, ಅವರ ಮಕ್ಕಳಿಗೆ ಶಿಕ್ಷಣ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ನಿಗಮ ಮಂಡಳಿಗಳಿಂದ ಅನುದಾನ ಸಹಿತ ಸಾಲದ ನೆರವು ನೀಡಲು ಅರ್ಹರ ಅರ್ಜಿಗಳನ್ನು ಬ್ಯಾಂಕಗಳಿಗೆ ಶಿಪಾರಸ್ಸು ಮಾಡಲಾಗಿದೆ. ಆದರೂ ಸರಿಯಾದ ಸಮಯಕ್ಕೆ ಸಾಲಸೌಲಭ್ಯ ದೊರಕುತ್ತಿಲ್ಲ. ಅಧಿಕಾರಿಗಳು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆ ಪರಿಹರಿಸಬೇಕೆಂದು ಅವರು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಡಾ.ಗೊಪಾಲಕೃಷ್ಣ ಬಿ., ಅವರು ಮಾತನಾಡಿ, ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ, ಕೆಲವು ಸ್ಥಳಗಳಲ್ಲಿ ವಿಶ್ರಾಂತಿ ಕೊಠಡಿ ನಿರ್ಮಾಣ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ವಿತರಣೆಗೆ ವ್ಯವಸ್ಥೆ ಮಾಡಿದ್ದು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಉಪ ಪೊಲೀಸ್ ಆಯುಕ್ತ ರಾಜೀವ ಎಂ., ಅವರು ವೇದಿಕೆಯಲ್ಲಿದ್ದರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾಬಕಾಷ್ .ಎಂ.ಎಸ್. ಅವರು ಸಾಗತಿಸಿ, ಸಭೆ ನಿರ್ವಹಿಸಿದರು.
ಸಭೆಯಲ್ಲಿ ಸಪಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಹಣಮಂತಪ್ಪ, ಭೀಮರಾವ್ ಸವಣೂರ, ರೇಣುಕಪ್ಪ ಕಲ್ಲೂರ, ವಿದ್ಯಾಲಕ್ಷಿ, ಎಸಿಪಿ ವಿಜಯಕುಮಾರ ಟಿ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು