ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ; ಮೇ 10ರಂದು ಮತದಾನ, 13ಕ್ಕೆ ಫಲಿತಾಂಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ರಾಜ್ಯದಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಮತದಾನ ನಡೆಯಲಿದೆ. ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ. ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮೇ. 23ರೊಳಗೆ ಮುಗಿದು ಹೊಸ ಸರಕಾರ ಅಧಿಕಾರಕ್ಕೆ ಬರಬೇಕಿದೆ. ರಾಜ್ಯದಲ್ಲಿ ಒಟ್ಟು ಮತದಾರರು, 5ಕೋಟಿ 21 ಲಕ್ಷ. ಇದರಲ್ಲಿ 2 ಕೋಟಿ 59 ಲಕ್ಷ ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಈ ಬಾರಿ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಲು ಉತ್ತೇಜಿಸಲಾಗಿದೆ ಎಂದರು.
ಚುನಾವಣಾ ಅಕ್ರಮ ತಡೆಯಲು 2,400 ವಿಚಕ್ಷಣ ತಂಡ ನಿಯೋಜನೆ ಮಾಡಲಾಗಿದೆ. ಅಕ್ರಮಗಳ ಮೇಲೆ ನಿಗಾವಹಿಸಲು 2016 ಫ್ಲೈಯಿಂಗ್ ಸ್ಕ್ವಾಡ್ ನಿಯೋಜಿಸಲಾಗಿದ್ದು ಎಲ್ಲಾ ವಿಮಾನ ನಿಲ್ದಾಣ, ಬಂದರು, ಹೆದ್ದಾರಿಗಳಲ್ಲಿ ಹದ್ದಿನಕಣ್ಣು ಇಡಲಿದೆ. ಎಲ್ಲಾ ನಗರ, ಜಿಲ್ಲಾ ಕೇಂದ್ರಗಳ ಗೋದಾಮುಗಳ ಮೇಲೆ ನಿಗಾ ಇಡಲಾಗುತ್ತೆ. ಬ್ಯಾಂಕ್ ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾ ಇಡಲಿದೆ. ಹಣದ ವ್ಯವಹಾರ, ಮದ್ಯ ಸಾಗಣೆ ಮೇಲೆ ನಿಗಾ ವಹಿಸಲಾಗುವುದು. ಮತದಾರರಿಗೆ ಗಿಫ್ಟ್ ಹಂಚಿಕೆ, ಹಣ ಹಂಚುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತೆ. ಮತದಾರರಿಗೆ ಆಮಿಷವೊಡ್ಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಲಾಗುತ್ತೆ ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲರಿಗೆ ವ್ಹೀಲ್ಚೇರ್ ವ್ಯವಸ್ಥೆ ಇರಲಿದೆ//////