ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಇಂದು ಚುನಾವಣಾಧಿಕಾರಿ ಕಚೇರಿಗೆ ತೆರಳಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸಾಥ್ ನೀಡಿದರು. ಇದಕ್ಕೂ ಮುನ್ನ ಲಕ್ಷ್ಮೀ ಹೆಬ್ಬಾಳಕರ್ ಅವರ ತಾಯಿ ಗಿರಿಜಾ ಬಸವರಾಜ ಹಟ್ಟಿಹೊಳಿ ಹಾಗೂ ಸಹೋದರಿ ಸೇರಿ, ನಮ್ಮ ಸಂಸ್ಕೃತಿ, ಸಂಪ್ರದಾಯದಂತೆ ಗೋಮಾತೆಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಕ್ಷೇತ್ರದ ಒಳಿತಿಗಾಗಿ ಪ್ರಾರ್ಥಿಸಿದರು. ನಂತರ ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ಹಾಗೂ ಉತ್ಸವದ ಶ್ರೀ ಮಳೆಕರಣಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅದ್ದೂರಿ ಮೆರವಣಿಗೆ: ಹಿಂಡಲಗಾ ಶ್ರೀ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ತೆರಳಿ ನಂತರ ಸಿಪಿಎಡ್ ಮೈದಾನದಿಂದ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಪಾರ ಜನಸ್ತೋಮದೊಂದಿಗೆ ಮೆರವಣಿಗೆ ಚಾಲನೆ ನೀಡಿದರು. ಅಪಾರ ಜನಸ್ತೋಮದ ಮಧ್ಯೆ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಭಿಮಾನಿಗಳತ್ತ ಕೈಬೀಸಿದರು. ಮೆರವಣಿಗೆ ಉದ್ದಕ್ಕೂ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ ಭಾವುಟ ಹಿಡಿದುಕೊಂಡು ಪಾಲ್ಗೊಂಡಿದ್ದರು. ಧೋಲ್ ತಾಶ ಡೊಳ್ಳು ವಾದನ ಸೇರಿದಂತೆ ವಿವಿಧ ವಾದ್ಯ ಮೇಳಗಳು ಮೆರವಣಿಗೆಯಲ್ಲಿ ಕಂಡು ಬಂದವು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳಕರ ಸೇರಿದಂತೆ ಕುಟುಂಬದ ಸದಸ್ಯರು, ಹಿತೈಷಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು./////