ಸಾಮಾಜಿಕ ನ್ಯಾಯದ ಪರ ಇರುವ ಕಾಂಗ್ರೆಸ್ ಗೆ ಮತ ನೀಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೈಲಹೊಂಗಲ: ದೇಶ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಸಾಮಾಜಿಕ ತಳಹದಿ ಮತ್ತು ಸಾಮಾಜಿಕ ನ್ಯಾಯದ ಪರ ಇರುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಮುರಗೋಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಹಾಂತೇಶ ಕೌಜಲಗಿ ಅವರನ್ನು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಮಾಡುವ ಮೂಲಕ ಕರ್ನಾಟಕದಲ್ಲಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿ ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಅಧಿಕಾರವನ್ನು ಒದಗಿಸಿಕೊಡುವ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಪಂಚಾಯಿತ್ ರಾಜ್ ಇಲಾಖೆ ಪ್ರಧಾನಿ ರಾಜೀವ್ ಗಾಂಧಿಯವರ ಕನಸಿನ ಕೂಸು, ಗ್ರಾಮೀಣ ಜನರೇ ಆಡಳಿತದಲ್ಲಿ ನೇರವಾಗಿ ಭಾಗಿಯಾಗಬೇಕು, ಆ ಮೂಲಕ ಅವರೇ ಗ್ರಾಮದ ಅಭಿವೃದ್ಧಿ ಮಾಡಬೇಕು ಎಂದು ಆಲೋಚಿಸಿ ಸಂವಿಧಾನವನ್ನು ತಿದ್ದುಪಡಿ ತಂದು ಗ್ರಾಮೀಣ ಜನರು ಅಧಿಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಹಾಂತೇಶ ಕೌಜಲಗಿ ಸೇರಿದಂತೆ ಸಾವಿರಾರೂ ಕಾರ್ಯಕರ್ತರು ಇದ್ದರು./////