ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳ ಜಾರಿಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಇಂದಿನಿಂದಲೇ ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಿತು.
ಮೊದಲ ಸಂಪುಟ ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ನನಗೆ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಧನ್ಯವಾದಗಳು. ಮೊದಲ ಸಂಪುಟ ಸಭೆಯಲ್ಲೇ ನಾವು ಚುನಾವಣೆಗೆ ಮುನ್ನ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿಗಳಿಗೆ ಒಪ್ಪಿಗೆ ಸಿಕ್ಕಿದೆ ಎಂದರು.
ನಾವು ನುಡಿದಂತೆ ನಡೆಯುತ್ತೇವೆ. ಈ ಹಿಂದೆಯೂ ಅಧಿಕಾರದಲ್ಲಿದ್ದಾಗ ನೀಡಿದ್ದ 160ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ನೀಡದ ಕೆಲವು ಹೆಚ್ಚುವರಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಈ ವಿಚಾರ ಪ್ರಸ್ತಾಪದ ಹಿಂದಿನ ಉದ್ದೇಶ ವಿರೋಧ ಪಕ್ಷಗಳು ಹೇಳಿದಂತೆ ನಮ್ಮ ಮಾತು ತಪ್ಪಲ್ಲ. ಜನರಿಗೆ ನಾವು ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂಬ ಭರವಸೆ ಇದೆ ಎಂದರು.
ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿಗಳ ಜಾರಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಒಪ್ಪಿಗೆ ಪಡೆದುಕೊಂಡಿದ್ದೇವೆ. ಇದಕ್ಕಾಗಿ ಸುಮಾರು 50 ಸಾವಿರ ಕೋಟಿ ಹಣ ಬೇಕಿದೆ ಎಂದರು.
ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳು ಹೀಗಿವೆ..!
*ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ. 2,000 ನೀಡುವ ಗೃಹಲಕ್ಷ್ಮಿ ಯೋಜನೆ
* ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ
*ಪದವಿಧರರಿಗೆ ರೂ.3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನೀಡುವ ಯುವನಿಧಿ ಯೋಜನೆ
*ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ
*ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆ//////