Belagavi News In Kannada | News Belgaum

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಶಿಕ್ಷಕ ಅಮಾನತು

ಚಿತ್ರದುರ್ಗ: ರಾಜ್ಯದ ನೂತನ ಸರ್ಕಾರ ರಚನೆಯ ಸಂದರ್ಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ಶಿಕ್ಷಕ ಅಮಾನತುಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಕರ್ನಾಟಕ ವಿಧಾನಸಭಾ ಫಲಿತಾಂಶ ಪ್ರಕಟವಾಗಿ ಒಂದು ವಾರದ ಬಳಿಕ ಮೇ 20 ಶನಿವಾರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಂತಮೂರ್ತಿಬ ಎನ್ನುವವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಿಂದಿನ ಸರ್ಕಾರಗಳಲ್ಲಿ ಮುಖ್ಯಮಂತ್ರಿಗಳು ಮಾಡಿದ್ದ ಸಾಲಗಳ ವಿಚಾರವಾಗಿ ಪ್ರಸ್ತಾಪ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕ ಶಾಂತಮೂರ್ತಿಯವರು ಸಿದ್ದರಾಮಯ್ಯ ಕುರಿತು ಎಲ್ಲ ಮುಖ್ಯಮಂತ್ರಿಗಳು ಮಾಡಿದ ಒಟ್ಟು ಸಾಲ 71, 331 ಕೋಟಿ ಆಗಿದ್ದರೇ, ಸಿದ್ದರಾಮಯ್ಯನವರು ಮಾಡಿದ ಸಾಲವೇ 2,42,000 ಕೋಟಿ ಆಗಿದೆ ಎಂದಿದ್ದರು.

ಕಾಂಗ್ರೆಸ್ ಪಕ್ಷ ಬಿಟ್ಟಿ ಭಾಗ್ಯ ಕೊಡದೆ ಇನ್ನೇನು ಎಂದು ನೂತನ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ವಿಷಯವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಕನ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಈ ದೂರಿನ ಅನ್ವಯ ಜಿಲ್ಲಾಧಿಕಾರಿಗಳು ಡಿಡಿಪಿಐಗೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಡಿಡಿಪಿಐ ಸೂಚನೆ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಂತಮೂರ್ತಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.//////