Belagavi News In Kannada | News Belgaum

ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ: ಈ ಷರತ್ತುಗಳು ಅನ್ವಯ

ಬೆಂಗಳೂರು: ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2,000ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಡಳಿತಾತ್ಮಕ ಅನುಮೋದನೆಯನ್ನು ಸರ್ಕಾರ ನೀಡಿದೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ.

ಕುಟುಂಬ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ, ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಈ ಹಿನ್ನಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.

ಮೇ 20 ರಂದು ನಡೆಸ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಈ ಬಳಿಕ ಗೃಹಲಕ್ಷ್ಮೀ ಯೋಜನೆಯ ರೂಪರೇಷೆ ಹಾಗೂ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ತಿಳಿಸಲಾಗಿತ್ತು ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹ ಲಕ್ಷ್ಮೀ ಯೋಜನೆಯನ್ನು 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಹೀಗಿವೆ ಗೃಹಲಕ್ಷ್ಮೀ ಯೋಜನೆಯ ಷರತ್ತುಗಳು

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಲಿದೆ.

ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸುವುದು. ಈ ನಂತ್ರ ಜುಲೈ.15ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುವುದು.

ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿ ಆಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು./////