ಧಾರಾಕಾರ ಮಳೆಗೆ ಹಬ್ಬಾನಹಟ್ಟಿ ಆಂಜನೇಯ ಮಂದಿರ ಮುಳುಗಡೆ

ಬೆಳಗಾವಿ: ಕಳೆದ ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಬ್ಬಾನಹಟ್ಟಿ ಮಾರುತಿ ಮಂದಿರವು ಸಂಪೂರ್ಣ ಜಲಾವೃತಗೊಂಡಿದೆ.
ಜಾಂಬೋಟಿ ಅರಣ್ಯದ ಹಬ್ಬನಹಟ್ಟಿ ಆಂಜನೇಯ ದೇವಾಲಯ ಮತ್ತು ಇಟಗಿಯ ಮರುಳಶಂಕರ ದೇವಾಲಯಗಳು ಮಲಪ್ರಭಾ ನದಿಯಲ್ಲಿ ಮುಳುಗಡೆಯಾಗಿವೆ. ಸತತ ಮಳೆಯ ಪರಿಣಾಮ ತಾಲ್ಲೂಕಿನ ನಾಗರಗಾಳಿ, ಗುಂಜಿ, ಲೋಂಡಾ, ಹೆಮ್ಮಡಗಾ, ನೇರಸೆ, ನೀಲಾವಡೆ, ಜಾಂಬೋಟಿ ಮತ್ತು ಕಣಕುಂಬಿ ಅರಣ್ಯಪ್ರದೇಶದ 50ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮತ್ತು ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ಈ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿದುಕೊಂಡಿದೆ. ಸತತವಾಗಿ ಸುರಿಯುತ್ತಿರುವ ಮಳೆ ಮತ್ತು ರಭಸದಿಂದ ಬೀಸುತ್ತಿರುವ ಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.
ಸೇತುವೆಗಳು ಜಲಾವೃತ: ಪಾಂಡರಿ ಮತ್ತು ಮಲಪ್ರಭಾ ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿರುವ ಕಾರಣ ಮಳೆಯರೌದ್ರನರ್ತನಕ್ಕೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳು ಜಲಾವೃತಗೊಂಡಿವೆ. ತಾಲ್ಲೂಕಿನ ಕಣಕುಂಬಿ, ಜಾಂಬೋಟಿ, ಲೋಂಡಾ ಮತ್ತು ಭೀಮಗಡ ಅರಣ್ಯಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಸಂಪರ್ಕ ಸೇತುವೆಗಳ ಮೇಲೆ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ದಾರೋಳಿ-ಮೋದೆಕೊಪ್ಪ, ಕುಸಮಳಿ-ಜಾಂಬೋಟಿ, ಅಸೋಗಾ-ಭೋಸಗಾಳಿ, ಅಮಟೆ-ಗೋಲ್ಯಾಳಿ, ಲೋಂಡಾ-ವರ್ಕಡ, ಹೆಮ್ಮಡಗಾ-ತಳೇವಾಡಿ, ನೇರಸಾ-ಕೊಂಗಳಾ, ಗವ್ವಾಳಿ, ಅಬನಾಳಿ-ಡೊಂಗರಗಾಂವ, ಶಿರೋಲಿ-ತಿವೋಲಿ, ಚಿಕಲೆ-ಅಮಗಾಂವ, ಮೋದೆಕೊಪ್ಪ-ಕೌಲಾಪುರ ಗ್ರಾಮಗಳ ನಡುವಿನ ಸೇತುವೆಗಳ ಮೇಲೆ ಐದಾರು ಅಡಿಗಳಷ್ಟು ನೀರು ಹರಿಯುತ್ತಿದೆ. ನದಿ, ಹಳ್ಳ-ಕೊಳ್ಳಗಳ ಸೇತುವೆಗಳ ಮೇಲೆ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ./////