Belagavi News In Kannada | News Belgaum

ಕೇಂದ್ರ ಸರಕಾರದ ಯೋಜನೆಗಳ ಕುರಿತು ಛಾಯಾಚಿತ್ರ ಪ್ರದರ್ಶನ: ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ

ಬೆಳಗಾವಿ, ಆ.02 : ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ ಧಾರವಾಡವು ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವ ಹಾಗೂ ಕೇಂದ್ರ ಸರ್ಕಾರದ ಇತರೆ ಯೋಜನೆಗಳ ಕುರಿತು ಐದು ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿ ಕಾರ್ಯಕ್ರಮವನ್ನು ಆಗಸ್ಟ್ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್ ಟಿ. ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಆ.1) ನಡೆದ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಗಸ್ಟ್ ಮಾಹೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸರಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿಯನ್ನು ನೀಡಲಾಗುವುದು ಎಂದು ಹೇಳಿದರು.

ಜನಪ್ರತಿನಿಧಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಛಾಯಾಚಿತ್ರ ಪ್ರದರ್ಶನದ ಜತೆಗೆ ಐದು ದಿನಗಳ ಕಾಲ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆಸಲಾಗುವುದು ಎಂದು ಶೃತಿ ತಿಳಿಸಿದರು.
ಐದು ದಿನಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆಯನ್ನು ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.