Belagavi News In Kannada | News Belgaum

ಮಾದಕವಸ್ತು ಮಾರಾಟ, ಸಾಗಾಣಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

 

ಬೆಳಗಾವಿ, ಸೆ.8 :  ಜಿಲ್ಲೆಯಲ್ಲಿ ಯಾವುದೇ ರೀತಿಯ ಮಾದಕವಸ್ತು ಸಾಗಾಣಿಕೆ ಮತ್ತು ಮಾರಾಟವನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮಾದಕ ವಸ್ತುಗಳ ಅಕ್ರಮ ಮಾರಾಟ ಕಂಡುಬಂದರೆ ಸಾರ್ವಜನಿಕರು ಕೂಡಲೇ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಸೆ.8) ನಡೆದ ಮಾದಕವಸ್ತುಗಳ ಮಾರಾಟ-ಸಾಗಾಣಿಕೆ ತಡೆ ಕುರಿತ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಯಾವುದೇ ಭಾಗದಲ್ಲಿ ಮಾದಕ ವಸ್ತುಗಳ ಸಂಗ್ರಹ, ಮಾರಾಟ, ಸಾಗಾಣಿಕೆ ಕಂಡುಬಂದಲ್ಲಿ ಮಾಹಿತಿಯನ್ನು ಒದಗಿಸಬೇಕು.
ಇದೇ ರೀತಿ ಶಾಲಾ-ಕಾಲೇಜುಗಳ ಬಳಿ ಮಾದಕ ವಸ್ತುಗಳ ಮಾರಾಟದ ಮೇಲೆ ಎಲ್ಲರೂ ನಿಗಾ ವಹಿಸಬೇಕು ಎಂದರು.

ಕೆಲವು ಕೃಷಿ ಜಮೀನುಗಳ ಮಧ್ಯೆ ಗಾಂಜಾ ಬೆಳೆಯುವುದು ಕೂಡ ಕೆಲವೆಡೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸ್ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಂತಹ ಮಾಹಿತಿಯನ್ನು ನೀಡುವವರ ಹೆಸರನ್ನು ಗೌಪ್ಯವಾಗಿರಿಸಲಾಗುವುದು.

ಮಾದಕವಸ್ತುಗಳ ಮಾರಾಟ ಅಥವಾ ಸಾಗಾಣಿಕೆಯನ್ನು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
ವಿದೇಶಿ ಸಿಗರೇಟ್, ತಂಬಾಕು ಮತ್ತಿತರ ಮಾದಕ ವಸ್ತುಗಳ ಅಕ್ರಮ‌ ಮಾರಾಟದ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಮಾದಕವಸ್ತು ಸಾಗಾಣಿಕೆ-ಪೊಲೀಸ್ ನಿಗಾ:

ರಾಜ್ಯದ ರಾಜಧಾನಿಯಲ್ಲಿ ಮಾದಕವಸ್ತು ಸೇವನೆ ಮತ್ತು ಮಾರಾಟ ಹಾವಳಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಇಂತಹ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.

ಮಾದಕವಸ್ತು ಪಿಡುಗು ತಡೆಗಟ್ಟಲು ಸಾರ್ವಜನಿಕರು ಸಹಕರಿಸಬೇಕು. ಬೆಳಗಾವಿ ಜಿಲ್ಲೆಯು ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜತೆ ಗಡಿ ಹಂಚಿಕೊಂಡಿರುವುದರಿಂದ ಮಾದಕ ವಸ್ತುಗಳ ಸಾಗಾಣಿಕೆ ಸಾಧ್ಯತೆಗಳಿರುತ್ತವೆ. ಆದ್ದರಿಂದ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಬೆಳಗಾವಿ ಉಪ ಪೊಲೀಸ್ ಆಯುಕ್ತರಾದ ರೋಹನ್ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಕಸ್ಟಮ್ಸ್ ಇಲಾಖೆಯ ಅಧಿಕಾರಿ ಶ್ರೀಕಾಂತ್, ಪ್ರೋಬೇಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.