ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ; ನರೇಗಾ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ, ನ.09: ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಂ ಪರ್ವೇಜ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ನ.9) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಒಂದು ವೇಳೆ ಸಮಸ್ಯೆ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು.
ಈಗಲೇ ಸಮಯಾವಕಾಶ ಇರುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸೂಕ್ತ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಅರ್ಹ ಪ್ರತಿಯೊಬ್ಬರಿಗೂ ನರೇಗಾ ಯೋಜನೆಯಡಿ ಕೆಲಸ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಸಕಾಲದಲ್ಲಿ ಕೂಲಿ ಜಮೆಯಾಗಬೇಕು ಎಂದು ತಿಳಿಸಿದರು.
ಮಳೆ ಕೊರತೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅದನ್ನು ನಿವಾರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು.
ನಿರಂತರ ನೀರು(24ಸ7) ಕಾಮಗಾರಿ ಚುರುಕುಗೊಳಿಸಲು ಸೂಚನೆ:
ಬೆಳಗಾವಿ ನಗರದಲ್ಲಿಯ ನಡೆಯುತ್ತಿರುವ ನಿರಂತರ ನೀರು(24ಸ7) ಪೂರೈಕೆ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ನಿರ್ದೇಶನ ನೀಡಿದರು.
ಈ ಯೋಜನೆ ಬೇಗ ಪೂರ್ಣಗೊಂಡರೆ ನಾಗರಿಕರಿಗೆ ಅನುಕೂಲವಾಗಲಿದೆ. ಆದ್ದರಿಂದ ಕಾಮಗಾರಿ ಚುರುಕುಗೊಳಿಸಬೇಕು ಎಂದರು.
ನಗರದಲ್ಲಿರುವ ಕೊಳವೆಬಾವಿಯ ನೀರಿನ ಗುಣಮಟ್ಟ ಪರಿಶೀಲಿಸಬೇಕು. ಪ್ರತಿಯೊಂದು ಕೊಳವೆಬಾವಿಗಳಿಗೆ ಕ್ರಮಸಂಖ್ಯೆಗಳನ್ನು ನೀಡಬೇಕು. ನಗರದಲ್ಲಿರುವ ಕೊಳವೆಬಾವಿಗಳ ದುರಸ್ತಿಗೆ ಆದ್ಯತೆ ನೀಡಬೇಕು.
ಬರ ನಿರ್ವಹಣೆಗೆ ಸರಕಾರದಿಂದ ಬಿಡುಗಡೆಯಾಗಿರುವ ಅನುದಾನದಲ್ಲಿ ಯಾವುದೇ ಕಾರಣಕ್ಕೂ ಹೊಸ ಕೊಳವೆಬಾವಿಗಳನ್ನು ಕೊರೆಯಬಾರದು. ಆದರೆ ಈಗಾಗಲೇ ಇರುವ ಕೊಳವೆಬಾವಿಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು.
ಗೃಹಲಕ್ಷ್ಮೀ ಯೋಜನೆಯಡಿ ನೋಂದಣ ಯಾಗಿರುವ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಅಡ್ಡಿಯಾಗಿರುವ ತಾಂತ್ರಿಕ ತೊಂದರೆಗಳನ್ನು ಕೂಡಲೇ ನಿವಾರಿಸಬೇಕು.
ಜಿಲ್ಲೆಯಲ್ಲಿ ಬಾಕಿ ಇರುವ 7 ಸಾವಿರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.
ಗೃಹಲಕ್ಷ್ಮೀ ಯೋಜನೆ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಗಳ ಪ್ರಯೋಜನವನ್ನು ಸರಕಾರದ ಆಶಯದಂತೆ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
ಎಲ್ಲ ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ನ್ಯಾಯಾಲಯದ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ನಿರ್ದೇಶನ ನೀಡಿದರು..
ಸಮಾಜಕಲ್ಯಾಣ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಸ್ಥಾಪನೆಗೆ ಅಗತ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಹೇಳಿದರು.
ಇದಲ್ಲದೇ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಅನುಕೂಲವಾಗುವಂತೆ ಜಾಗೆಯನ್ನು ಮಂಜೂರು ಮಾಡಬೇಕು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು.
ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ- ನಿಗದಿತ ಗುರಿ ಸಾಧನೆಗೆ ಸೂಚನೆ:
ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ. ಅನುದಾನ ಬಳಕೆಯ ಪ್ರಗತಿ ಅತ್ಯಂತ ಕಡಿಮೆ ಇರುವುದರಿಂದ ನಿಗದಿತ ಕಾಲಾವಧಿಯಲ್ಲಿ ಅನುದಾನವನ್ನು ಖರ್ಚು ಮಾಡಬೇಕು.
ನಿಗದಿತ ಗುರಿ ಸಾಧಿಸದೇ ಇರುವ ಇಲಾಖೆಯ ಅಧಿಕಾರಿಗಳನ್ನು ಹೊಣೆಯಾಗಿಸಿ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಬೈಲಹೊಂಗಲ, ಬೆಳಗಾವಿ ನಗರ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ತಿಳಿಸಿದರು.
ಬರ ನಿರ್ವಹಣೆಗೆ 22.50 ಕೋಟಿ ಅನುದಾನ:
ಬರ ನಿರ್ವಹಣೆಗೆ ರಾಜ್ಯ ಸರಕಾರ 22.50 ಕೋಟಿ ರೂಪಾಯಿ ಬಿಡುಗಡೆ ಮಾಡಿರುತ್ತದೆ.
ಈ ಅನುದಾನದಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಯಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲೆಗೆ 17 ಸಾವಿರ ಮೇವಿನ ಕಿಟ್ ಗಳ ಗುರಿ ನೀಡಲಾಗಿದ್ದು, ಸದ್ಯಕ್ಕೆ 4 ಸಾವಿರ ಕಿಟ್‍ಗಳು ಬಂದಿರುತ್ತವೆ.
ಜಾನುವಾರುಗಳನ್ನು ಹೊಂದಿರುವ ಕೃಷಿಕರಿಗೆ ಮಾತ್ರ ಮೇವಿನ ಕಿಟ್ ವಿತರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಅವರು ಜಿಲ್ಲೆಯಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಹಳೆಯ ಕೊಳವೆಬಾವಿ ದುರಸ್ತಿ ಜತೆಗೆ ಹೊಸದಾಗಿ ಕೊಳವೆಬಾವಿ ಕೊರೆಸಲಾಗುವುದು ಎಂದು ಹೇಳಿದರು.
ಹದಿನೈದು ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ. ಹಿಂಗಾರು ಹಂಗಾಮು ಅಕ್ಟೋಬರ್ ನಲ್ಲಿ ಶೇ. 78ರಷ್ಟು ಮಳೆ ಕೊರತೆಯಾಗಿದೆ. ಹಿಂಗಾರು ಬಿತ್ತನೆ ಕುಂಠಿತಗೊಂಡಿದ್ದು, ಕೇವಲ ಶೇ.38 ರಷ್ಟು ಬಿತ್ತನೆಯಾಗಿದೆ.
ಇತ್ತೀಚಿನ ಮಳೆಯಿಂದ ಹೊಸದಾಗಿ ಬಿತ್ತನೆಗೆ ಸಾಧ್ಯವಾಗುವುದಿಲ್ಲ. ಆದರೆ ಈಗಾಗಲೇ ಬಿತ್ತನೆಯಾಗಿರುವ ಬೆಳೆ ಚೇತರಿಕೆಯಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ವಿವರಿಸಿದರು.
ಪೆÇ್ರಬೇಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ್ ಹೆಗ್ಗನಾಯಿಕ, ಉಪ ವಿಭಾಗಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.