Belagavi News In Kannada | News Belgaum

ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಜತೆ ಚರ್ಚೆ: ಎಂ ಬಿ ಪಾಟೀಲ

ಸುವರ್ಣಸೌಧದ ಬಳಿ ಪ್ರತಿಭಟನೆ

*ಸುವರ್ಣಸೌಧದ ಬಳಿ ಪ್ರತಿಭಟನೆ*

ಅತಿಥಿ ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಕುರಿತು ಸಿಎಂ ಜತೆ ಚರ್ಚೆ: ಎಂ ಬಿ ಪಾಟೀಲ

ಬೆಳಗಾವಿ: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತು ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ, ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸುವರ್ಣಸೌಧದ ಬಳಿ ಪ್ರತಿಭಟನಾನಿರತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ತಮಗೆ ನೀಡಿದ ಮನವಿಗಳನ್ನು ಅವರು ಗುರುವಾರ ಇಲ್ಲಿ ಸ್ವೀಕರಿಸಿ ಮಾತನಾಡಿದರು.

ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿ ಕುರಿತು ಅದರ ಆರ್ಥಿಕ ಪರಿಣಾಮಗಳನ್ನು ಪರಿಗಣಿಸಿ, ಮುಂದಿನ ಹೆಜ್ಜೆ ಇಡಬೇಕಾಗುತ್ತದೆ. ಈ ಸಂಬಂಧವಾಗಿ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಸರಕಾರವು ಈಗಾಗಲೇ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ 34 ಸಾವಿರ ಕೋಟಿ ರೂಪಾಯಿ ವಿನಿಯೋಗ ಮಾಡುತ್ತಿದೆ. ಮುಂದಿನ ವರ್ಷದಿಂದ ಇದಕ್ಕೆ 58 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಸರಕಾರವು ತನ್ನ ಇತಿಮಿತಿಗಳನ್ನು ಅರಿತು ಸೂಕ್ತ ಕ್ರಮ ಕೈಗೊಳ್ಳಲು ಮುಕ್ತ ಮನಸ್ಸು ಹೊಂದಿದೆ ಎಂದು ಅವರು ನುಡಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಮಸ್ಯೆಗಳು ಪ್ರಿಯಾಂಕಾ ಗಾಂಧಿಯವರ ಗಮನಕ್ಕೂ ಬಂದಿದೆ. ಈ ಸಮಸ್ಯೆಗಳನ್ನು ಇಂದು ಸಂಜೆಯೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅವಗಾಹನೆಗೆ ತರಲಾಗುವುದು. ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಪರವಾಗಿದೆ ಎಂದು ಪಾಟೀಲ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎರಡೂ ಸಂಘಟನೆ ಪರವಾಗಿ ಹನುಮಂತಗೌಡ ಕಲ್ಮನಿ, ಶಿವಣ್ಣ, ಜಯಮ್ಮ ಮುಂತಾದವರು ಉಪಸ್ಥಿತರಿದ್ದರು.