Belagavi News In Kannada | News Belgaum

ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಮಹಿಳಾ ಆಯೋಗ…

ಬೆಳಗಾವಿ: ದುಷ್ಕರ್ಮಿಗಳಿಂದ ಅಮಾನವೀಯ ಕೃತ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯವನ್ನು ರಾಷ್ಟ್ರೀಯ ಮಹಿಳಾ ಆಯೋಗ ವಿಚಾರಿಸಿತು.

ಇಂದು ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್​ಗೆ ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಗಡುಪ್ ನೇತೃತ್ವದ ತಂಡವು ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿ ಧೈರ್ಯ ತುಂಬಿತು.

 

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡೆಲಿನಾ ಖೊಂಗಡುಪ್, ಮಹಿಳೆಯನ್ನು ವಿವಸ್ತ್ರಗೊಳಿಸಿರುವುದು ದುರದೃಷ್ಟಕರ. ಇಂತಹ ಘಟನೆ ಆಗಬಾರದಿತ್ತು. ಜನರು ತಮ್ಮ ಮನಸ್ಥಿತಿ ಬದಲಿಸಿಕೊಳ್ಳಬೇಕು. ಪೊಲೀಸ್ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಮಹಿಳೆಯನ್ನು ರಕ್ಷಿಸುವ ಕೆಲಸ ಆಗಬೇಕು. ಈ ಘಟನೆ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಘಟನೆ ನಡೆದ ಸ್ಥಳಕ್ಕೂ ಭೇಟಿ ನೀಡಲಿದ್ದೇನೆ ಎಂದು ಹೇಳಿದರು.

ಈ ವೇಳೆ ಜಿಲ್ಲಾಧಿಕಾರಿ ನಿತೇಶ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್‌ ಜಗದೀಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ ಸೇರಿ ಮತ್ತಿತರ ಅಧಿಕಾರಿಗಳು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಾಥ್ ಕೊಟ್ಟರು.