Belagavi News In Kannada | News Belgaum

ಶೀಘ್ರದಲ್ಲಿ ಎಲ್ಲ ಪೌರಕಾರ್ಮಿಕರಿಗೂ ನೇಮಕಾತಿ ಆದೇಶ: ಸಚಿವ ರಹೀಂ ಖಾನ್ ಭರವಸೆ

ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಸಮಾರಂಭ

ಬೆಳಗಾವಿ, ಜ.02: ನಗರದ ಸ್ವಚ್ಛತೆ ಕಾಪಾಡಿ, ಹಿರಿಮೆ ಹೆಚ್ಚಿಸಲು ಪೌರ ಕಾರ್ಮಿಕರ ಪಾತ್ರ ಬಹಳಷ್ಟಿದೆ. ಅವರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಶೇಕಡಾ 70% ರಷ್ಟು ಪೌರ ಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಖಾಯಂಗೊಳಿಸಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.

ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಜ.02) ನಡೆದ ಬೆಳಗಾವಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ನೇಮಕಾತಿ ಆದೇಶಪತ್ರಗಳನ್ನು ವಿತರಿಸಿ, ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕಿಂತ ಮುಂಚೆಯ ಅಧಿಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಈಶ್ವರ್ ಖಂಡ್ರೆ ಅವರು ಪೌರಾಡಳಿತ ಸಚಿವರಿದ್ದರು ಅಂದಿನ ದಿನಗಳಲ್ಲಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಲು ಸೂಚಿಸಿದ್ದರು. ಅದರಂತೆ ಸಿಂ ಸಿದ್ದರಾಮಯ್ಯ ಅವರು ಎಲ್ಲ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.

ಶೀಘ್ರದಲ್ಲಿ ಎ -ಖಾತಾ, ಬಿ- ಖಾತಾ ವಿತರಣೆ:

ಸುಮಾರು ಜನರು ಅನಧಿಕೃತ ಬಡಾವಣೆಗಳಲ್ಲಿ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ತೆರಿಗೆ ಪಾವತಿಸದಿದ್ದರೂ ಅಂತಹ ಮನೆಗಳಿಗೆ ಮೂಲಸೌಕರ್ಯ ಒದಗಿಸಬೇಕಿದೆ. ಆದ್ದರಿಂದ ರಾಜ್ಯದಾದ್ಯಂತ ಇರುವ ಮನೆಗಳಿಗೆ ಎ- ಖಾತಾ ಹಾಗೂ ಬಿ ಖಾತಾ ಮಾಡಿಕೊಡಲಾಗುವುದು ಎಂದು ಸಚಿವ ರಹಿಂ ಖಾನ್ ಭರವಸೆ ನೀಡಿದರು.

ಈ ಕುರಿತು ವಿವಿಧ ಸಚಿವರ ಉಪ ಸಂಪುಟ ಸಮಿತಿ ರಚಿಸಲಾಗಿದೆ. ಈಗಾಗಲೇ ನಾಲ್ಕು ಬಾರಿ ನಡೆದ ಸಭೆಗಳಲ್ಲಿ ಎ ಖಾತಾ ಬಿ ಖಾತಾ ನೀಡಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಎ-ಖಾತಾ ಬಿ-ಖಾತಾ ನೀಡಲು ಪ್ರಾರಂಭಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

ಜಿಲ್ಲೆಯ ಪೌರ ಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ನೀಡುತ್ತಿರುವುದು ಸಂತಸದ ವಿಷಯ. ಬಹಳ ದಿನಗಳಿಂದ ಪೌರ ಕಾರ್ಮಿಕರ ಖಾಯಂ ಗೊಳಿಸುವ ಕುರಿತು ಹೋರಾಟಗಳನ್ನು ನೋಡಿದ್ದೇವೆ. ಅವರ ಬೇಡಿಕೆಗಳನ್ನು ಈಡೇರಿಸುವ ಭಾಗ್ಯ ಇಂದು ನಮ್ಮದಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.

ಪೌರ ಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರದಿಂದ ನಿರಂತರ ಸ್ಪಂದನೆ:

ಜಗತ್ತು ಎಷ್ಟೇ ಮುಂದುವರಿದರೂ ಪೌರಕಾರ್ಮಿಕರು ಚರಂಡಿಗಳ ಸ್ವಚ್ಛತೆಗೆ ಇಳಿದಿರುವುದನ್ನು ನಾವು ನೋಡಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರ ಇದರಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ. ಪೌರಕಾರ್ಮಿಕರ ಯಾವುದೇ ಸಮಸ್ಯೆಗೆ ಸ್ಪಂದಿಸಲು ಸರ್ಕಾರ ಜಿಲ್ಲಾಡಳಿತ ಸಿದ್ಧವಿದೆ.

ಜಿಲ್ಲೆಯಲ್ಲಿ ಇನ್ನೂ ಸುಮಾರು 400 ಕ್ಕಿಂತ ಹೆಚ್ಚು ಪೌರಕಾರ್ಮಿಕರನ್ನು ಖಾಯಂಗೊಳಿಸಿ ಆದೇಶ ನೀಡಬೇಕಿದೆ. ನ್ಯಾಯಾಲಯದ ತಡೆಯಾಜ್ಞೆ ಆಗಿರುವ ಕಾರಣ ಸ್ವಲ್ಪ ವಿಳಂಬವಾಗಿದೆ. ಆದರೆ ಸರ್ಕಾರ ಇದರ ಕಡೆಗೆ ಗಮನಹರಿಸಿ ನ್ಯಾಯ ಒದಗಿಸುವ ಕಾರ್ಯ ಮಾಡಲಿದೆ ಎಂದು ಭರವಸೆ ನೀಡಿದರು.

ಹೆಚ್ಚಿನ ಸುರಕ್ಷಾ ಪರಿಕರಗಳ ಅಗತ್ಯ:

ದೇಶದ ಜನತೆಯ ಆರೋಗ್ಯ, ನಗರ ಸೌಂದರ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸರ್ಕಾರರಿಂದ ಅಗತ್ಯ ಸುರಕ್ಷಾ ಪರಿಕರಗಳು, ಸಮವಸ್ತ್ರ ಸೇರಿದಂತೆ ಇನ್ನೂ ಬಹಳಷ್ಟು ಸೌಲಭ್ಯ ಪೌರಕಾರ್ಮಿಕರಿಗೆ ನೀಡಲಾಗುವುದು ಎಂದು ಸಚಿವ ಜಾರಕಿಹೊಳಿ ಅವರು ಹೇಳಿದರು.

ಈ ವೇಳೆ ಮಾತನಾಡಿದ ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್ ಅವರು ನಗರ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಪೌರಕಾರ್ಮಿಕರು ಸ್ವಚ್ಛತಾ ಸೈನಿಕರಾಗಿ ಕಾರ್ಯನಿರ್ವಹಿಸುತ್ತಾರೆ. ಸರ್ಕಾರ ನಿರಂತರ ನಿಮ್ಮ ಪರವಾಗಿದೆ. ಪೌರಕಾರ್ಮಿಕರಿಗೆ ಆಧಾರ ಕಲ್ಪಿಸಲು ಸರ್ಕಾರ ನೇಮಕಾತಿ ಆದೇಶ ನೀಡಿದೆ.

ಪ್ರತಿ ಪೌರಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಂಡು ಸುರಕ್ಷಾ ಸಾಧನಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಮ್ಮ ಕಾರ್ಯ ಶ್ಲಾಘನೀಯವಾಗಿದ್ದು, ನಿಮ್ಮ ವೈಯಕ್ತಿಕ ಆರೋಗ್ಯವನ್ನು ಸಧೃಡವಾಗಿಟ್ಟುಕೊಳ್ಳಬೇಕು. ಪೌರ ಕಾರ್ಮಿಕರ ಯಾವುದೇ ಸಮಸ್ಯೆ ಇದ್ದರೂ ತಕ್ಷಣ ಸ್ಪಂದಿಸಲಾಗುವುದು ಎಂದು ಶಾಸಕ ಆಸೀಫ್ (ರಾಜು) ಸೇಠ್ ಅವರು ಹೇಳಿದರು.

ನಿಗದಿತ ದಿನಾಂಕದೊಳಗೆ ವೇತನ ಪಾವತಿಸಿ:

ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ-2 ಪ್ರಕಾಶ್ ಹುಕ್ಕೇರಿ ಅವರು, ಪೌರಕಾರ್ಮಿಕರು ಸ್ವಚ್ಛತೆಗೆ ನಿರಂತರ ಶ್ರಮಿಸುತ್ತಿದ್ದಾರೆ. ಅವರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನ ಪಾವತಿಸಬೇಕು ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಹೇಳಿದರು.

ಸುಮಾರು 368 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪ್ರತಿ ನೀಡಲಾಗಿದೆ. ಜಿಲ್ಲೆಯ ಸ್ವಚ್ಛತೆ ಕಾಪಾಡುವುದರ ಜೊತೆಗೆ ಕೋವಿಡ್ ಸಮಯದಲ್ಲಿ ತಮ್ಮ ಜೀವ ಲೆಕ್ಕಿಸದೆ ಪೌರ ಕಾರ್ಮಿಕರು ಜನತೆಯ ಸೇವೆ ಮಾಡಿದ್ದಾರೆ. ಸರ್ಕಾರದ ಹೊಸ ಮಾರ್ಗಸೂಚಿಯಂತೆ ಎಲ್ಲಾ ಪೌರ ಕಾರ್ಮಿಕರಿಗೆ ಮತ್ತೆ ನೇಮಕಾತಿ ಆದೇಶ ಪತ್ರಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಲ್ಲಿಕಾರ್ಜುನ ಕಲಾದಗಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ನೇಮಕಾತಿ ಆದೇಶ ಪತ್ರಗಳ ವಿತರಣೆ:

ಇದಕ್ಕೂ ಮುಂಚೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಚನ್ನರಾಮ ಹಟ್ಟಿಹೊಳಿ ಅವರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.

ಬೆಳಗಾವಿ ಮಹಾನಗರಪಾಲಿಕೆಯ 155 ಮತ್ತು ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 213 ಜನ ಸೇರಿದಂತೆ ಒಟ್ಟು 368 ಪೌರಕಾರ್ಮಿಕರನ್ನು ಸರಕಾರಿ ನೌಕರರನ್ನಾಗಿ ನೇಮಕಾತಿ ಮಾಡಲಾದ ನೇಮಕಾತಿ ಆದೇಶಪತ್ರಗಳನ್ನು ವಿತರಿಸಲಾಯಿತು.

ಅದೇ ರೀತಿಯಲ್ಲಿ ಪೌರ ಕಾರ್ಮಿಕರ ನಿವೇಶನ ಸ್ವಾಧೀನದ ಆದೇಶ ಪತ್ರಗಳನ್ನು ಕೂಡ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಬೆಳಗಾವಿ ಮಹಾಪೌರರಾದ ಶೋಭಾ ಸೋಮನಾಚೆ, ಉಪ ಮಹಾಪೌರರಾದ ರೇಶ್ಮಾ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಉಪ ಆಯುಕ್ತೆ ರೇಷ್ಮಾ ತಾಳಿಕೋಟಿ, ಹಾಗೂ ನಗರ ಸೇವಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ಲಾಸಿಕ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ:

ಕಾರ್ಯಕ್ರಮದ ಬಳಿಕ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್,ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ  ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ಮಹಾನಗರ ಪಾಲಿಕೆ ಮುಖ್ಯ ಕಚೇರಿಯ ಮುಂಭಾಗದಲ್ಲಿ ನಿರುಪಯುಕ್ತ, ನಿಷೇಧಿತ ಪ್ಲಾಸ್ಟಿಕ್ ತ್ಯಾಜ್ಯದಿಂದ ಪ್ಲಾಸಿಕ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪಾಲಿಕೆ ಆಯುಕ್ತ ಅಶೋಕ ದುಡುಗುಂಟಿ, ಮತ್ತಿತರರು ಅಧಿಕಾರಿಗಳು ಹಾಜರಿದ್ದರು.