Belagavi News In Kannada | News Belgaum

ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಕಾವಲು ಸಮಿತಿ ರಚನೆ ಕಡ್ಡಾಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆ

 

ಬೆಳಗಾವಿ, ಜ.05 : ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಕಾವಲು ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕು. ಮಹಿಳೆಯರ ದೌರ್ಜನ್ಯ, ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟಲು ಇಂತಹ ಸಮಿತಿಗಳ ಮೂಲಕ ಕಟ್ಟುನಿಟ್ಟಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜ.05) ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಜಿಲ್ಲೆಯಲ್ಲಿ ಮಹಿಳೆಯರು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದ್ದರಿ‌ಂದ ಈ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ಕಡ್ಡಾಯವಾಗಿ ರಚಿಸಬೇಕು. ಯಾವ ಗ್ರಾಮ ಪಂಚಾಯತಿಗಳಲ್ಲಿ ಕಾವಲು ಸಮಿತಿ ಸಭೆ ಆಗಿಲ್ಲ; ಅಂತಹ ಕಡೆ ಕೂಡಲೇ ಸಮಿತಿ ರಚಿಸಿ, ಸಭೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಈಗಾಗಲೇ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚು ತರಬೇತಿ ಅಗತ್ಯವಿದೆ. ಪೋಕ್ಸೋ ದೌರ್ಜನ್ಯ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಆಗಬೇಕು.

ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದಲ್ಲಿ ಪದರತಿ ಶಾಲೆಯಲ್ಲಿ ಒಬ್ಬರು ಮಹಿಳಾ ಶಿಕ್ಷಕಿಯನ್ನು ಆಯ್ಕೆ ಮಾಡಿ ಅವರು ಮಕ್ಕಳು-ಮಹಿಳಾ ದೌರ್ಜನ್ಯಗಳ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ನಿಯೋಜಿಸಬೇಕು ಎಂದು ತಿಳಿಸಿದರು.

ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳು ಕಂಡುಬಂದರೆ ತಕ್ಷಣ ವರದಿ ಸಲ್ಲಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಬೇಕು. ರಾಮದುರ್ಗ ಹಾಗೂ ಸವದತ್ತಿಯಲ್ಲಿ ಕಳೆದ ವರ್ಷ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದು, ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಬೇಕು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರು ತಿಳಿಸಿದರು.

ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಪೊಲೀಸ್ ಇಲಾಖೆಯು ಎಲ್ಲ ರೀತಿಯ ಸಹಕಾರ ನೀಡಲಿದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ನಡೆಯದಂತೆ ನಾವೆಲ್ಲರೂ ತಡೆಯಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಹೇಳಿದರು.

ಮಕ್ಕಳ ರಕ್ಷಣಾ ನಿಯಮಾವಳಿ ಪುಸ್ತಕ ಬಿಡುಗಡೆ:

ಇದೇ ವೇಳೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಮಕ್ಕಳ ಹಕ್ಕು, ರಕ್ಷಣೆ ಹಾಗೂ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಮಾಹಿತಿಯಿರುವ ಮಕ್ಕಳ ರಕ್ಷಣಾ ನಿಯಮಾವಳಿಯ ಕುರಿತು ಪುಸ್ತಕ ಬಿಡುಗಡೆ ಗೊಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ. ಮುರಳಿ ಮೋಹನ್ ರೆಡ್ಡಿ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹಾಂತೇಶ ಭಜಂತ್ರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಗಂಗಾಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ನಗರ, ಅಪರಾಧ ವಿಭಾಗದ ಎಸಿಪಿ ಕಟ್ಟಿಮನಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.