Belagavi News In Kannada | News Belgaum

ಪಿಸ್ತೂಲು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಅಕ್ರಮವಾಗಿ ಪಿಸ್ತೂಲುಗಳು ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಾರಾಷ್ಟ್ರ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ ಎರಡು ಕಂಟ್ರಿಮೇಡ್ ಪಿಸ್ತೂಲು ಹಾಗೂ ಒಂಭತ್ತು ಜೀವಂತ ಗುಂಡುಗಳು, ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪೈಕಿ ಒಬ್ಬಾತ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಕರ್ನಾಟಕ ರಾಜ್ಯದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವ ಏಜೆಂಟ್. ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ವರ್ಷವಿದ್ದು ಆ ಸಮಯದಲ್ಲಿ ಪರಿಚಯವಾಗಿದ್ದ ರೌಡಿಗಳಿಗೆ ಪಿಸ್ತೂಲುಗಳನ್ನು ಮಾರಾಟ ಮಾಡಲು ಬಂದಿರುವ ಬಗ್ಗೆ ಅನುಮಾನವಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ.
ಜ. 14ರಂದು ಬೆಳಗ್ಗೆ 11.30ರ ಸುಮಾರಿನಲ್ಲಿ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ರಿಂಗ್ ರಸ್ತೆ, ಕೆರೆ ಹತ್ತಿರ ಸಿಸಿಬಿ ಪೊಲೀಸ್ ತಂಡ ಕಾರ್ಯಾಚರಣೆ ನಡೆಸುತ್ತಿದ್ದಾಗ ಅಂತರ್ರಾಜ್ಯ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರ ಮೂಲದ ಈ ಇಬ್ಬರು ಆರೋಪಿಗಳಿಂದ ಎರಡು ಕಂಟ್ರಿಮೇಡ್ ಪಿಸ್ತೂಲು, 9 ಜೀವಂತ ಗುಂಡುಗಳು, ಕಾರು ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿರುತ್ತಾರೆ.
ಆರೋಪಿಗಳ ಪೈಕಿ ಒಬ್ಬನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಮಹರಾರಾಷ್ಟ್ರದ ಮೀರಜ್ನ ಮಹಾತ್ಮ ಗಾಂಧಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಮೀರಜ್ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು, ಸಾಂಗ್ಲಿ ವೆಲ್ವಾಡಿ ಪೊಲೀಸ್ ಠಾಣೆಯಲ್ಲಿ ಒಂದು, ಮೀರಜ್ ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ಒಂದು ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತನಿಖೆಯಿಂದ ಗೊತ್ತಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿ ಕೈಗೊಂಡಿದ್ದರು.