Belagavi News In Kannada | News Belgaum

ಜೆಜೆಎಂ ಕಾಮಗಾರಿಗಳನ್ನು ಪೂರ್ಣಗೊಳಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ

ಬೆಳಗಾವಿ: (ಜ.20): ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು. ಹರ್ ಘರ್ ಜಲ ಗ್ರಾಮವೆಂದು ಘೋಷಣೆ ಮಾಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಹೇಳಿದರು.‌
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಜ.20) ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‌
ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕವಾಗಿ ಪರಿಶೀಲನೆ ಮಾಡಿ, ಬೆಳಗಾವಿ ವಿಭಾಗದಡಿ 4 ಹೊಸದಾಗಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳಿದ್ದು, ಅರಣ್ಯ ಇಲಾಖೆಯ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಕೆಲಸ ಪ್ರಾರಂಭಿಸಬೇಕು ಎಂದು ಸೂಚಿಸಿದರು.
ಬೇಸಿಗೆ ಕಾಲದಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಬೇಕು. ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಮಾಡಬೇಕು. ಎರಡು ವಿಭಾಗಗಳ ಗ್ರಾಮ ಮಟ್ಟದಲ್ಲಿನ ಓವರ್ ಹೆಡ್ ಟ್ಯಾಂಕ್ ಗಳನ್ನು ತಿಂಗಳಿಗೆ ಕನಿಷ್ಠ ಒಂದು ಬಾರಿ ಗ್ರಾಪಂಗಳು ಸ್ವಚ್ಛಗೊಳಿಸಬೇಕು. ಅದರ ಉಸ್ತುವಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.‌
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮೊದಲಾದವರು ಇದ್ದರು.