Belagavi News In Kannada | News Belgaum

ಡಾ.ಬಾಬು ಜಗಜೀವನರಾಮ ಜಯಂತಿ; ಪೂರ್ವಸಿದ್ಧತಾ ಸಭೆ

ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

 

ಬೆಳಗಾವಿ, ಮಾ.30: ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ ಉದ್ಯಾನವನದಲ್ಲಿ ಏಪ್ರಿಲ್.5 ರಂದು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.30) ನಡೆದ ಡಾ.ಬಾಬು ಜಗಜೀವನರಾಮ ಜಯಂತಿ ಆಚರಣೆ ಕುರಿತು ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ವೇಳೆ ಯಾವುದೇ ರಾಜಕೀಯ ಪರ ಭಾಷಣ ಮಾಡಬಾರದು. ರಾಜಕೀಯ ಪಕ್ಷಗಳ ಚಿಹ್ನೆ ಬಳಕೆ, ಪ್ರಚಾರ ಸೇರಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ, ಶಾಲಾ ಕಾಲೇಜುಗಳಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಕಡ್ಡಾಯವಾಗಿ ಆಚರಿಸಬೇಕು ಎಂದು ಸೂಚನೆ ನೀಡಿದರು.

ಮೆರವಣಿಗೆ ಕಾರ್ಯಕ್ರಮ:

ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಿಂದ ನಗರದ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಗಮೇಶ್ವರ ನಗರದ ಡಾ. ಬಾಬು ಜಗಜೀವನರಾಮ ಉದ್ಯಾನವನದವರೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಗೆ ಮೆರಗು ನೀಡಲು ಸ್ಥಳೀಯ 5 ವಿವಿಧ ಕಲಾ ತಂಡಗಳನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಅದೇ ರೀತಿಯಲ್ಲಿ ಪ್ರತಿ ವರ್ಷದಂತೆ ಜಯಂತಿ ನಿಮಿತ್ಯ ಚಿಕ್ಕೋಡಿ ಶೈಕ್ಷಣಿಕ ಕ್ಷೇತ್ರದ ಪ್ರತಿಭಾವಂತ 10 ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗುವುದು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿದ್ದು, ಪೊಲೀಸ್ ಇಲಾಖೆಯಿಂದ ಸೂಕ್ತ ಪೊಲೀಸ್ ಬಂದ್ ಬಸ್ತ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಹೇಳಿದರು.

ಇದೇ ವೇಳೆ ಬಾಬು ಜಗಜೀವನ ರಾಮ್ ಉದ್ಯಾನವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಶೌಚಾಲಯ, ವಿಶ್ರಾಂತಿ ಗೃಹ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಮುಖಂಡರೊಬ್ಬರು ಮನವಿ ಮಾಡಿಕೊಂಡರು.

ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಬಿ ಬಸರಗಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರಾದ ಮಲ್ಲೇಶ ಚೌಗಲಾ, ಯಲ್ಲಪ್ಪ ಹುದಲಿ, ಕರೆಪ್ಪ ಗುಡೆನ್ನವರ, ಸೇರಿದಂತೆ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.