Belagavi News In Kannada | News Belgaum

ಪ್ರತಿ ಠಾಣೆಗೂ ತೆರಳಿ ಪರಿಶೀಲನೆ ನಡೆಸಿ: ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಎಸ್‌ಪಿ, ಡಿಸಿಪಿ, ಐಜಿಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್‌ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್‌ ದಂಧೆ ನಿಲ್ಲಿಸದಿದ್ದರೆ ಎಸ್‌ಪಿ ಮತ್ತು‌ ಐಜಿ ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್‌ಪಿ, ಐಜಿಗಳು ಪ್ರತಿ ಠಾಣೆಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾಳೆಯಿಂದಲೇ ಎಸ್‌ಪಿ, ಐಜಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು.

ಫೇಕ್ ನ್ಯೂಸ್‌ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ ಪ್ಯಾಕ್ಟ್‌ ಚೆಕ್‌ ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್‌ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ. ಹೀಗಾಗಿ ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.